ಸಿಎಸ್‌ಬಿ ರಚನೆಗೆ ಕೋರಿ ಪಿಐಎಲ್; ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್
- by Jagan Ramesh
- August 20, 2024
- 64 Views
ಬೆಂಗಳೂರು: ನಾಗರಿಕ ಸೇವಕರೆನಿಸಿಕೊಳ್ಳುವ ಐಎಎಸ್ ಅಧಿಕಾರಿಗಳ ವರ್ಗಾವಣೆ, ನಿರ್ದಿಷ್ಟ ಸ್ಥಳ ಮತ್ತು ಹುದ್ದೆೆಯಲ್ಲಿ ಕರ್ತವ್ಯ ನಿರ್ವಹಿಸುವ ಕನಿಷ್ಠ ಸೇವಾವಧಿ ನಿಗದಿಪಡಿಸುವ ಹಾಗೂ ಕರ್ತವ್ಯ ನಿರ್ವಹಣೆ ವೇಳೆ ಅವರ ಹಿತ ಕಾಯುವ ಉದ್ದೇಶ ಹೊಂದಿರುವ “ನಾಗರಿಕ ಸೇವಾ ಮಂಡಳಿ” (ಸಿಎಸ್‌ಬಿ) ರಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಕರ್ನಾಟಕದಲ್ಲಿ ಸಿಎಸ್‌ಬಿ ರಚಿಸಲು ಹಾಗೂ ಅಧಿಕಾರಿಗಳ ಕನಿಷ್ಠ ಸೇವಾವಧಿ ನಿಗದಿಪಡಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ರಿಷಬ್ ಟ್ರಾಕ್ರೂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಐಎಎಸ್ ಅಧಿಕಾರಿಗಳು ಮೌಖಿಕ ಸೂಚನೆ, ಆದೇಶ, ಅಭಿಪ್ರಾಯ ಅಥವಾ ಪ್ರಸ್ತಾವನೆ ಆಧರಿಸಿ ಸೇವೆ ಸಲ್ಲಿಸುವಂತಾಗಬಾರದು. ಜತೆಗೆ, ಐಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಮೇಲಧಿಕಾರಿಗಳು, ರಾಜಕಾರಣಿಗಳು ಹಾಗೂ ಇತರರ ನ್ಯಾಯಬಾಹಿರ ಹಾಗೂ ನಿರಂಕುಶ ಒತ್ತಡದಿಂದ ರಕ್ಷಿಸಬೇಕು. ಈ ನಿಟ್ಟಿಿನಲ್ಲಿ ನಾಗರಿಕ ಸೇವಕ ಅಧಿಕಾರಿಗಳಿಗೆ ಕನಿಷ್ಠ ಸೇವಾವಧಿಗೆ ಮಾರ್ಗಸೂಚಿ ನಿಗದಿಪಡಿಸಲು ಕೇಂದ್ರ ಸರ್ಕಾರದಂತೆ ಎಲ್ಲ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಸಿಎಸ್‌ಬಿ ರಚಿಸಬೇಕು ಎಂದು 2013ರಲ್ಲಿ ಸುಪ್ರೀಂಕೋರ್ಟ್ ನಿರ್ದೇಶಿಸಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ದೇಶದ 20 ರಾಜ್ಯಗಳಲ್ಲಿ ಈಗಾಗಲೇ ಸಿಎಸ್‌ಬಿ ರಚನೆಯಾಗಿದೆ. ಆದರೆ, ಕರ್ನಾಟಕದಲ್ಲಿ 2014ರಲ್ಲಿ ಮಂಡಳಿ ರಚಿಸಿ, ನಂತರ ರದ್ದುಪಡಿಸಲಾಗಿದೆ. ಸಿಎಸ್‌ಬಿ ರಚನೆ ಸಂಬಂಧ ಹೈಕೋರ್ಟ್ ಸಹ 2021ರಲ್ಲಿ ಆದೇಶ ನೀಡಿದ್ದರೂ ಈವರೆಗೂ ಮಂಡಳಿ ರಚನೆಯಾಗಿಲ್ಲ ಎಂದು ಹೈಕೋರ್ಟ್ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಹೇಳಿರುವ ವಿಷಯದ ಬಗ್ಗೆೆ ಯಾವುದೇ ತಕರಾರಿಲ್ಲ. ಆದರೆ, ಜುಲೈ 11ರಂದು ಸರ್ಕಾರಕ್ಕೆೆ ಮನವಿ ಸಲ್ಲಿಸಿರುವ ಅರ್ಜಿದಾರರು, ಅದನ್ನು ಪರಿಶೀಲಿಸಲು ಸರ್ಕಾರಕ್ಕೆೆ ಸಮಯವನ್ನೂ ಕೊಡದೆ ಜುಲೈ 18ರಂದು ಪಿಐಎಲ್ ಸಲ್ಲಿಸಿದ್ದಾರೆ. ಜತೆಗೆ, ನ್ಯಾಯಾಲಯದ ಮುಂದೆ ಮಂಡಿಸಿರುವ ವಿವರಗಳು ಸರ್ಕಾರಕ್ಕೆೆ ಸಲ್ಲಿಸಿರುವ ಮನವಿಯಲ್ಲಿಲ್ಲ. ಪರಿಷ್ಕೃತ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.
ಆಗ ನ್ಯಾಯಪೀಠ, ಸಿಎಸ್‌ಬಿ ರಚನೆಗೆ 2013ರಲ್ಲಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಆಗ ಮಂಡಳಿ ರಚನೆ ಮಾಡಿ, ರದ್ದುಪಡಿಸಲಾಗಿದೆ. 2021ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದ್ದರೂ ಸರ್ಕಾರ ಸಿಎಸ್‌ಬಿ ರಚಿಸಿಲ್ಲವೆಂದು ಬೇಸರ ವ್ಯಕ್ತಪಡಿಸಿತು. ಇದೇ ವೇಳೆ, ಸರ್ಕಾರದ ಈ ಕ್ರಮ ನ್ಯಾಯಾಂಗ ನಿಂದನೆಗೆ ಸಮವೆಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ ವಿಚಾರಣೆಯನ್ನು ಸೆಪ್ಟಂಬರ್ 9ಕ್ಕೆೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)