ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ಮಿತಿ ಮೀರಿದ ದಟ್ಟಣೆ; ಕ್ರಮ ಜರುಗಿಸಲು ಸರ್ಕಾರಕ್ಕೆ ಹೈಕೋರ್ಟ್ ತಾಕೀತು
- by Jagan Ramesh
- August 20, 2024
- 232 Views
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ-ಎಸ್ಟಿ) ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಪ್ರವೇಶ ಮಿತಿಗಿಂತ ಅಧಿಕ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ, ದಟ್ಟಣೆ ತಪ್ಪಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.
ರಾಜ್ಯದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಕೊರತೆಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಇದಕ್ಕೂ ಮುನ್ನ ಸರ್ಕಾರದ ಪರ ವಕೀಲರು, ರಾಜ್ಯದ ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಮಿತಿ, ಸದ್ಯ ಇರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಾರ್ಡನ್ ಹುದ್ದೆಗಳ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಹಾಸ್ಟೆಲ್‌ಗಳಲ್ಲಿ ಪ್ರವೇಶ ಮಿತಿಗಿಂತ ಮೂರ್ನಾಲ್ಕು ಪಟ್ಟು ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದ ಅಂಶ ಗಮನಿಸಿದ ಪೀಠ ಆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿತು.
ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ:
ಕೊಪ್ಪಳದ ಹಾಸ್ಟೆಲ್‌ನಲ್ಲಿ 75 ಪ್ರವೇಶ ಮಿತಿಯಿದ್ದರೂ 214 ವಿದ್ಯಾರ್ಥಿಗಳಿದ್ದಾರೆ. 50 ಪ್ರವೇಶ ಮಿತಿ ಇರುವ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಮೆಟ್ರಿಕ್‌ಪೂರ್ವ ಹಾಸ್ಟೆಲ್‌ನಲ್ಲಿ 150 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ಬಹುತೇಕ ಹಾಸ್ಟೆಲ್‌ಗಳ ಇದೇ ಸ್ಥಿತಿ ಇದೆ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳನ್ನು ಈ ರೀತಿಯಾಗಿ ನಡೆಸಿಕೊಳ್ಳುತ್ತಿರುವುದು ಸರಿಯಲ್ಲ. ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಿ ಪರಿಹಾರ ಕ್ರಮ ಕೈಗೊಳ್ಳುವ ತುರ್ತು ಅವಶ್ಯಕತೆ ಇದೆ ಎಂದು ನ್ಯಾಯಪೀಠ ತೀಕ್ಷ್ಣವಾಗಿ ನುಡಿಯಿತು.
ಹಾಸ್ಟೆಲ್‌ಗಳಲ್ಲಿ 548 ವಾರ್ಡನ್ ಹಾಗೂ 53 ಕಿರಿಯ ವಾರ್ಡನ್ ಹುದ್ದೆಗಳು ಖಾಲಿಯಿವೆ. ಅವುಗಳ ಭರ್ತಿಗೂ ಸರ್ಕಾರ ಗಮನ ಹರಿಸಬೇಕಿದೆ ಎಂದ ಪೀಠ, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಘನತೆ-ಗೌರವದಿಂದ ಇರುವುದಕ್ಕೆ ಸರ್ಕಾರದ ಬಳಿ ಇರುವ ಪರಿಹಾರವೇನು? ಖಾಲಿ ಹುದ್ದೆಗಳ ಭರ್ತಿಗೆ ಕೈಗೊಳ್ಳುವ ಕ್ರಮಗಳೇನು ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಸೆಪ್ಟಂಬರ್ 13ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)