ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಮಂದಿ ದುರ್ಮರಣ!

ರಾಂಚಿ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ರಾಂಚಿ–ಪಾಟ್ನಾ ರಾಷ್ಟ್ರೀಯ ಹೆದ್ದಾರಿಯ ಪೈಂಕಿ ಪ್ರದೇಶದಲ್ಲಿ ಬೆಳಗಿನ ಜಾವ ಸುಮಾರು 2 ಗಂಟೆಗೆ ಎಸ್‌ಯುವಿ ವಾಹನ ಅಪಘಾತಕ್ಕೀಡಾಗಿದೆ.

ವಾಹನದಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದು, ನಾಲ್ವರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಹಾರದ ನಳಂದ ಜಿಲ್ಲೆಯ ಜಂಘಾರೋ ಗ್ರಾಮದ ನಿವಾಸಿಗಳು ರಾಜರಪ್ಪ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಬದುಕುಳಿದ ಒಬ್ಬರು ಗಾಯಗೊಂಡಿದ್ದು, ರಾಮಗಢ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರು ಪೊಲೀಸರೊಂದಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿ, ವಾಹನದ ಅವಶೇಷಗಳಿಂದ ಪ್ರಯಾಣಿಕರನ್ನು ಹೊರತೆಗೆದಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Related Articles

Comments (0)