ನ್ಯಾಯಮೂರ್ತಿಗಳ ಹೇಳಿಕೆಗೆ ವಕೀಲರ ಸಂಘದ ಆಕ್ಷೇಪ; ಕೆಲ ದಿನಗಳವರೆಗೆ ಲೈವ್ ಸ್ಟ್ರೀಮಿಂಗ್ ನಿರ್ಬಂಧಿಸಲು ಸಿಜೆಗೆ ಮನವಿ

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಮುಸ್ಲಿಮರು ಮತ್ತು ಮಹಿಳಾ ವಕೀಲರೊಬ್ಬರ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಬೆಂಗಳೂರು ವಕೀಲರ ಸಂಘ (ಎಎಬಿ), ಕೆಲ ದಿನಗಳ ಕಾಲ ನ್ಯಾಯಾಲಯದ ಕಲಾಪಗಳ ನೇರ ಪ್ರಸಾರ (ಲೈವ್‌ ಸ್ಟ್ರೀಮಿಂಗ್‌) ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ ಅಂಜಾರಿಯಾ ಅವರಿಗೆ ಶುಕ್ರವಾರ ಪತ್ರ ಬರೆಯಲಾಗಿದ್ದು, ಇತ್ತೀಚೆಗೆ ಹೈಕೋರ್ಟ್‌ ಕಲಾಪದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಶ್ರೀಶಾನಂದ ಅವರು ವ್ಯಕ್ತಪಡಿಸಿದ ಅಭಿಪ್ರಾಯವು ಗಂಭೀರ ವಿವಾದ ಸೃಷ್ಟಿಸಿ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ. ಕಲಾಪದ ಲೈವ್‌ ಸ್ಟ್ರೀಮಿಂಗ್‌ ಆಗಿದ್ದು, ವಿಚಾರಣೆ ವೇಳೆ ನ್ಯಾಯಮೂರ್ತಿಗಳು ನೀಡಿರುವ ಹೇಳಿಕೆಯು ವೈರಲ್‌ ಆಗಿದೆ. ಇದರಿಂದ, ವಕೀಲಿ ವೃತ್ತಿಯನ್ನು ಪರಿಶುದ್ಧ ಎಂದು ಪರಿಗಣಿಸಿರುವ ಎಲ್ಲ ವಕೀಲರ ಭಾವನೆಗಳಿಗೂ ನೋವುಂಟು ಮಾಡಿದೆ. ಇಂತಹ ಹೇಳಿಕೆಗಳಿಗೆ ವಕೀಲರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಪತ್ರದಲ್ಲಿ ಎಎಬಿ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಎಂ.ಟಿ ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಶಾನಂದ ಅವರು ಮಹಿಳಾ ವಕೀಲೆಯೊಬ್ಬರ ಕುರಿತು ಈಚೆಗೆ ನೀಡಿರುವ ಹೇಳಿಕೆಯೊಂದು ರಾಷ್ಟ್ರದ ಗಮನ ಸೆಳೆದಿದೆ. ಇದರಿಂದ, ವಕೀಲರು ಅದರಲ್ಲೂ ಮಹಿಳಾ ವಕೀಲರನ್ನು ನ್ಯಾಯಮೂರ್ತಿಗಳು ನಡೆಸಿಕೊಳ್ಳುತ್ತಿರುವ ವಿಚಾರ ಮುನ್ನೆಲೆಗೆ ಬಂದಿದೆ. ಆದ್ದರಿಂದ, ಮುಕ್ತ ನ್ಯಾಯಾಲಯದಲ್ಲಿ ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವವರೆಗೆ ಅಂತಹ ನ್ಯಾಯಾಲಯಗಳ ಲೈವ್‌ ಸ್ಟ್ರೀಮಿಂಗ್‌ ಅನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಇಲ್ಲವಾದಲ್ಲಿ ಪರಿಸ್ಥಿತಿ ಕೈಮೀರಲಿದೆ. ಸಾರ್ವಜನಿಕರ ಮನಸ್ಸಿನಲ್ಲಿ ಅನ್ಯ ಅಭಿಪ್ರಾಯ ಮೂಡಿ ನ್ಯಾಯಾಲಯಗಳ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದಿರುವ ವಕೀಲರ ಸಂಘ, ಈ ಕುರಿತು ತುರ್ತಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂಬ ಆಶಾಭಾವನೆ ಹೊಂದಿರುವುದಾಗಿ ಪತ್ರದಲ್ಲಿ ಹೇಳಿದೆ.

ಪ್ರಾಮಾಣಿಕತೆಗೆ ಹೆಸರಾಗಿರುವ ನ್ಯಾಯಮೂರ್ತಿ ಶ್ರೀಶಾನಂದ ಅವರು ಉತ್ತಮ ತೀರ್ಪುಗಳನ್ನು ನೀಡಿದ್ದಾರೆ. ಆದರೆ, ಆಕ್ಷೇಪಾರ್ಹ ಹೇಳಿಕೆಗಳಿಂದ ನ್ಯಾಯಮೂರ್ತಿಗಳು ಮಾಡಿರುವ ಉತ್ತಮ ಕೆಲಸಗಳಿಗೆ ಅಪಚಾರ ಉಂಟಾಗುತ್ತಿದೆ. ಕೆಲವು ಸಂದರ್ಭದಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯ ಮತ್ತು ಮೂದಲಿಕೆಗಳು ಅಪ್ರಸ್ತುತವಾಗಿವೆ ಎಂದು ಸಿಜೆಗೆ ಎಎಬಿ ಬರೆದಿರುವ ಪತ್ರದಲ್ಲಿ ಹೇಳಲಾಗಿದೆ.

Related Articles

Comments (0)

Leave a Comment