ಪಿಒಪಿ ಗಣಪತಿ ಮೂರ್ತಿಗಳ ನಿಷೇಧವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿರೀಕ್ಷೆ ಇದೆ; ಹೈಕೋರ್ಟ್
- by Prashanth Basavapatna
- August 15, 2025
- 177 Views

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣಪತಿ ಮೂರ್ತಿಗಳ ತಯಾರಿಕೆ, ವಿತರಣೆ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಸರ್ಕಾರದ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಾನೂನಿನ ಅನುಸಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಿವೆ ಎಂದು ನಿರೀಕ್ಷೆ ಹೊಂದಿರುವುದಾಗಿ ಹೈಕೋರ್ಟ್ ಹೇಳಿದೆ.
ಪಿಒಪಿ ಮೂರ್ತಿಗಳನ್ನು ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆ ಹಾಗೂ ಇತರ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಸಲ್ಲಿಸಿದ್ದ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪಿಒಪಿ ಮೂರ್ತಿಗಳ ತಯಾರಿಕೆ, ವಿತರಣೆ, ಮಾರಾಟ ಇನ್ನಿತರ ವಿಷಯದ ಕುರಿತು ಯಾವುದೇ ನಿರ್ದಿಷ್ಟ ನಿರ್ದೇಶನವನ್ನು ನೀಡಲು ನಿರಾಕರಿಸಿದ ನ್ಯಾಯಪೀಠ, 2023ರಲ್ಲಿ ಹೊರಡಿಸಲಾದ ಸರ್ಕಾರಿ ಅಧಿಸೂಚನೆ ಜಾರಿಯಲ್ಲಿರುವುದರಿಂದ ಮತ್ತದೇ ಆದೇಶ ಹೊರಡಿಸುವ ಅಗತ್ಯವಿಲ್ಲ. ನಿಸ್ಸಂಶಯವಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ 2023ರ ಸರ್ಕಾರಿ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಜಾರಿಗೆ ತರಲಿವೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.
ಇದಕ್ಕೂ ಮುನ್ನ ಕೆಎಸ್ಪಿಸಿಬಿ ಪರ ವಕೀಲರು ವಾದ ಮಂಡಿಸಿ, 2023ರ ಸರ್ಕಾರಿ ಆದೇಶವನ್ನು ಸಮರ್ಪಕವಾಗಿ ಪಾಲನೆಯಾಗಿಲ್ಲ. ಮಾರುಕಟ್ಟೆಯಲ್ಲಿ ಪಿಒಪಿ ಇಂದ ತಯಾರಿಸಿರುವ ಗೌರಿ ಹಾಗೂ ಗಣೇಶ ಮೂರ್ತಿಗಳು ಕಾಣಿಸಿಕೊಳ್ಳುತ್ತಿವೆ. ಕುಂಬಳಗೋಡು ಹೋಬಳಿಯ ಹುಳಿಮಾವು ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ಪಿಒಪಿ ಮೂರ್ತಿ ತಯಾರಿಸುತ್ತಿರುವ ವಿಚಾರ ತಿಳಿದುಬಂದಿದೆ. ಪಿಒಪಿ ಮೂರ್ತಿಗಳು ನೀರಿನಲ್ಲಿ ಮುಳುಗಿದಾಗ ನೀರಿನಲ್ಲಿರುವ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತದೆ. ಜಲ ಮೂಲಗಳು ಮತ್ತು ಪರಿಸರದ ಮೇಲೂ ಗಂಭೀರ ಪರಿಣಾಮ ಉಂಟಾಗಲಿದೆ. ಇದು ಸಂವಿಧಾನ ಪರಿಚ್ಛೇದ 21ರ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಸರ್ಕಾರದ ಪರ ವಕೀಲರು, ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೆಲ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಕಾನೂನಿನ ಅನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
Related Articles
Thank you for your comment. It is awaiting moderation.
Comments (0)