ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುತ್ತಿಲ್ಲ; ಬೆಂಗಳೂರು ಕಂಬಳ ಸಮಿತಿಯಿಂದ ಹೈಕೋರ್ಟ್ಗೆ ಮಾಹಿತಿ
- by Jagan Ramesh
- October 23, 2024
- 174 Views
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಬೆಂಗಳೂರು ಕಂಬಳ ಸಮಿತಿ ಪರ ಹಾಜರಿದ್ದ ವಕೀಲ ವಿನೋದ್ ಕುಮಾರ್, ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡುವ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರಲು ಸಾಧ್ಯವಾಗುತ್ತದೆ. ನವೆಂಬರ್ 9ರಂದು ದಕ್ಷಿಣ ಕನ್ನಡದ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ವೇಳೆ ಉಂಟಾಗುವ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಕಳೆದ ವರ್ಷ ಬೆಂಗಳೂರು ಕಂಬಳಕ್ಕೆ ಕಾನೂನು ಪ್ರಕಾರ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವುದರಿಂದ ಕೋಣಗಳಿಗೆ ಹಿಂಸೆಯಾಗುತ್ತದೆ ಎನ್ನುವುದು ಅರ್ಜಿದಾರರ ಆಕ್ಷೇಪವಾಗಿದೆ. ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ನಡೆಸಬೇಕೆ ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ ಎಂದರು.
ಕಂಬಳ ಇಡೀ ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದಾಗಿದೆ. ಇದನ್ನು ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ ಎಂಬ ಪ್ರಶ್ನೆ ಇದೆ. ಕುದುರೆ ರೇಸ್ ಸಂದರ್ಭಗಳಲ್ಲಿ ಬೇರೆ ಬೇರೆ ದೇಶಗಳಿಂದ ಕುದುರೆಗಳನ್ನು ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಕಂಬಳ ಆಯೋಜನೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡರೂ ನ್ಯಾಯಪೀಠಕ್ಕೆ ತಿಳಿಸಲಾಗುವುದು ಎಂದು ಹೇಳಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ಅರ್ಜಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)