ಕಾಲ್ತುಳಿತ ದುರಂತ; ವಸ್ತುಸ್ಥಿತಿ ವರದಿ ಬಹಿರಂಗಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Ramya B T
- July 8, 2025
- 96 Views

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು 4 ದಿನಗಳಲ್ಲಿ ಬಹಿರಂಗಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕಾಲ್ತುಳಿತ ದುರ್ಘಟನೆ ಸಂಬಂಧ ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕಳೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ (Sealed Cover) ಸಲ್ಲಿಸಿರುವ ವಸ್ತುಸ್ಥಿತಿ ವರದಿಯನ್ನು 4 ದಿನಗಳಲ್ಲಿ ಸಾರ್ವಜನಿಕಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.
ಅರ್ಜಿ ಕುರಿತು ಜುಲೈ 1ರಂದು ನಡೆದ ವಿಚಾರಣೆ ವೇಳೆ, ಪ್ರಕರಣದ ವಸ್ತುಸ್ಥಿತಿ ವರದಿ ಬಹಿರಂಗಗೊಳಿಸಲು 10 ದಿನ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಕೋರಿತ್ತು. ಬಳಿಕ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 8) ಮುಂದೂಡಿತ್ತು. ಇದೀಗ ನಾಲ್ಕು ದಿನಗಳಲ್ಲಿ ವರದಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.
ಅನುಮತಿ ಇಲ್ಲದೆ ಸಕ್ಷಮ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ ಬೇಡ:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಅಂತಿಮ ವರದಿಯನ್ನು ಹೈಕೋರ್ಟ್ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ರದ್ದು ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡಿಎನ್‌ಎ ಎಂಟರ್ಟೇನ್ಮೆಂಟ್ ನೆಟ್‌ವರ್ಕ್ಸ್ ಸಲ್ಲಿಸಿರುವ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಸರ್ಕಾರ ತನಿಖೆ ಮುಂದುವರಿಸಬಹುದು. ಆದರೆ, ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ಆದೇಶಿಸಬೇಕು ಎಂದು ಕೋರಿದರು.
ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಮಧ್ಯಂತರ ಆದೇಶ ಮಾಡದಿದ್ದರೆ ಏನೂ ಆಗುವುದಿಲ್ಲ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದ್ದರಿಂದ, ಯಾವುದೇ ಆದೇಶ ಮಾಡಬಾರದು ಎಂದು ಮನವಿ ಮಾಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಾಲಿ ಅರ್ಜಿಗಳನ್ನು ವಿಸ್ತೃತವಾಗಿ ಆಲಿಸಬೇಕಿದೆ. ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವುದರಿಂದ ಈ ಪ್ರಕರಣಗಳಿಗೆ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಹೈಕೋರ್ಟ್ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದು ಎಂದು ಆದೇಶಿಸಿ, ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)