ಹೈಕೋರ್ಟ್‌ ಕಟ್ಟಡ ನಿರ್ಮಾಣಕ್ಕೆ ಟರ್ಫ್‌ ಕ್ಲಬ್‌ ಭೂಮಿ ಮಂಜೂರಾತಿಗೆ ಯೋಜನೆ; ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು: ಹೊಸ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕಾಗಿ ಬೆಂಗಳೂರಿನ ಟರ್ಫ್ ಕ್ಲಬ್‌ನ ಭೂಮಿಯನ್ನು ಮುಂದಿನ ವಾರ ಮಂಜೂರು ಮಾಡಲು ಯೋಜಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಭೂಮಿಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಶರಣ್ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಹೊಸ ಹೈಕೋರ್ಟ್ ಕಟ್ಟಡ ನಿರ್ಮಾಣಕ್ಕಾಗಿ ಬೆಂಗಳೂರಿನ ಟರ್ಫ್ ಕ್ಲಬ್‌ನ ಭೂಮಿಯನ್ನು ಮುಂದಿನ ವಾರ ಮಂಜೂರು ಮಾಡುವ ಯೋಜನೆಯಿದೆ. ಈ ಕುರಿತಂತೆ ಟರ್ಫ್ ಕ್ಲಬ್ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸುತ್ತೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅದಕ್ಕೆ ನ್ಯಾಯಪೀಠ, ಹೊಸ ಕಟ್ಟಡ ಮುಂದಿನ 30ರಿಂದ 50 ವರ್ಷಗಳ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ನಿರ್ಮಾಣವಾಗಬೇಕು ಎಂದು ಮೌಖಿಕವಾಗಿ ಹೇಳಿತು.

ಅಡ್ವೋಕೇಟ್ ಜನರಲ್ ಅವರು, ಪ್ರಸ್ತುತ ಸ್ಥಳಾವಕಾಶ ಮತ್ತು ಭವಿಷ್ಯದ ಅಗತ್ಯತೆಗಳನ್ನು ಪರಿಗಣಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫ್ಲೋರ್ ಏರಿಯಾ ರೇಷಿಯೋ (ಎಫ್ಎಆಎರ್) ವಿನಾಯಿತಿ ಸೇರಿ ಹಲವು ಕಾನೂನು ಅಡೆತಡೆಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ತಿಳಿಸಲು ಒಂದು ವಾರ ಅಥವಾ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.

Related Articles

Comments (0)

Leave a Comment