ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್‌ಗೆ ಮತ್ತೆ ಸಂಕಷ್ಟ?; ಮಧ್ಯಂತರ ಆದೇಶ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಐಡಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ (ಬಿ.ಎ. ಬಸವರಾಜ) ಅವರನ್ನು ಬಂಧಿಸದಂತೆ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ತೆರವುಗೊಳಿಸುವಂತೆ ಕೋರಿ ತನಿಖಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಸಲ್ಲಿಸಿರುವ ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಷ್ಟು ದಿನಗಳ ಅವಧಿಗೆ ಕಸ್ಟಡಿ ಬೇಕೆಂದು ಕೋರ್ಟ್‌ಗೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿತು. ಜತೆಗೆ, ಅರ್ಜಿಗೆ ಅಕ್ಟೋಬರ್ 8ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಬೈರತಿ ಬಸವರಾಜ್ ಪರ ವಕೀಲರಿಗೆ ಸೂಚಿಸಿ, ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್‌.ಜಗದೀಶ್‌, ಈ ಪ್ರಕರಣದಲ್ಲಿಹಲವರ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಹಿಂದಿನ ವಿಚಾರಣೆಗಳ ವೇಳೆ ಬೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ. ಆದ್ದರಿಂದ, ಅವರನ್ನು ಬಂಧಿಸಿದಂತೆ ಈ ಹಿಂದೆ ಹೊರಡಿಸಿರುವ ನಿರ್ಬಂಧ ಆದೇಶ ತೆರವುಗೊಳಿಸಬೇಕೆಂದು ಮನವಿ ಮಾಡಿದರು.

ಸಿಐಡಿ ಪೊಲೀಸರ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಬೈರತಿ ಬಸವರಾಜು ಪರ ಹಿರಿಯ ವಕೀಲ ಸಂದೇಶ್‌ ಚೌಟ, ಪೊಲೀಸರು ಕಳೆದ ಒಂದು ತಿಂಗಳಿನಿಂದ ವಿಚಾರಣೆಗೆ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲ ಅರ್ಜಿದಾರರು ತೆರಳಿ ವಿಚಾರಣೆಗೆ ಸಹಕರಿಸಿದ್ದಾರೆ. ಈಗ ಏಕಾಏಕಿ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ. ಅದರ ಅಗತ್ಯತೆ ಏಕೆಂದು ಹೇಳುತ್ತಿಲ್ಲ. ಆದ್ದರಿಂದ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ‌ ಕೋರಿದರು.

ಪ್ರಕರಣವೇನು?
ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ಬಿಕ್ಲು ಶಿವನ ಕೊಲೆಯಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್‌ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಬಂಧನ ಭೀತಿಯಿಂದ ಹೈಕೋರ್ಟ್‌ ಮೊರೆ ಹೋಗಿದ್ದರು. ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಬೈರತಿ, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದರು. ಬೈರತಿ ಬಸವರಾಜ್ ಅವರನ್ನು ಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು, ಅದನ್ನು ತೆರವುಗೊಳಿಸುವಂತೆ ಕೋರಿ ಇದೀಗ ಸಿಐಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

Related Articles

Comments (0)

Leave a Comment