ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಅಂತಿಮ ವರದಿ ಸಲ್ಲಿಕೆಗೆ ನೀಡಿದ್ಧ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಸ್ತರಿಸಿದೆ.

ಎಫ್‌ಐಆರ್‌ ರದ್ದು ಕೋರಿ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಎಸ್‌ಪಿಪಿ ಬಿ.ಟಿ. ವೆಂಕಟೇಶ್‌ ಅವರು, ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಸರ್ಕಾರ ಮೆಮೊ ಸಲ್ಲಿಸಿದೆ. ಅದನ್ನು ಪರಿಗಣಿಸಿ ಅನುಮತಿ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಸರ್ಕಾರದ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆರ್‌ಸಿಬಿ ಪರ ವಕೀಲರು, ಅಂತಿಮ ವರದಿ ಸಲ್ಲಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶವಿದೆ. ಆದ್ದರಿಂದ, ಎಫ್‌ಐಆರ್‌ ರದ್ದು ಕೋರಿರುವ ನಮ್ಮ ವಾದ ಮೊದಲು ಪರಿಗಣಿಸಬೇಕು. ಕ್ರೀಡಾಂಗಣದ ಹೊರಗಿನ ಘಟನೆಗೆ ಸಂಸ್ಥೆಗಳನ್ನು ಹೊಣೆ ಮಾಡಬಾರದು. ನಮ್ಮ ಅರ್ಜಿ ತೀರ್ಮಾನಿಸದೇ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಬಾರದು ಎಂದು ಕೋರಿದರು.

ಇದನ್ನು ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿತಲ್ಲದೆ, ಅಂತಿಮ ವರದಿ ಸಲ್ಲಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು. ಜತೆಗೆ ಮಾರ್ಚ್ 14ರೊಳಗೆ ಆಕ್ಷೇಪಣೆ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.

Related Articles

Comments (0)

Leave a Comment