ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ; ಎಫ್‌ಐಆರ್‌ನ ಮುಂದಿನ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
- by Jagan Ramesh
- October 30, 2025
- 408 Views
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ಮಾಡಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ಮಾಡಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ (FIR No. 39/2025), ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಅದೇಶ ಮಾಡಿತು.
ಇದರಿಂದ, ನೂರಾರು ಶವಗಳನ್ನು ಹೂಳಲಾದ ಆರೋಪ ಬಹುತೇಕ ಸುಳ್ಳು ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಎಸ್‌ಐಟಿ ಪೊಲೀಸರು, ಆ ಪ್ರಕರಣವನ್ನು ಅಲ್ಲಿಗೇ ಕೈ ಬಿಟ್ಟು ಈ ನಾಲ್ವರು ಅರ್ಜಿದಾರರ ವಿರುದ್ಧವೇ ಪ್ರಕರಣ ದಾಖಲಿಸಿ ನಡೆಸುತ್ತಿದ್ದ ತನಿಖೆಗೂ ಇದೀಗ ತಡೆ ಬಿದ್ದಂತಾಗಿದೆ.
ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಅರ್ಜಿಯ ಮುಂದಿನ ವಿಚಾರಣೆಯವರೆಗೆ ತಡೆ ನೀಡಿತಲ್ಲದೆ, ಅರ್ಜಿದಾರರಿಗೆ ಕಿರುಕುಳ ನೀಡದಂತೆ ಪೊಲೀಸರಿಗೆ ನಿರ್ದೇಶಿಸಿತು. ಜತೆಗೆ, ಎಸ್‌ಐಟಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ಪೀಠ, ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
ಅರ್ಜಿದಾರರ ವಾದವೇನು?
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಎಸ್. ಬಾಲನ್ ವಾದ ಮಂಡಿಸಿದ, ಅರ್ಜಿದಾರರಿಗೆ ಈಗಾಗಲೇ 9 ಬಾರಿ ನೋಟಿಸ್ ಜಾರಿಗೊಳಿಸಿ ವಿಚಾರಣೆ ನಡೆಸಿದ್ದಾರೆ. ಆದರೆ, ಎಫ್ಐಆರ್‌ನಲ್ಲಿ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್‌ಆ್ಯಪ್, ಇ-ಮೇಲ್ ಮೂಲಕ ನೀಡಿದ್ದಾರೆ. ಜತೆಗೆ, ಬಿಎನ್‌ಎಸ್‌ಎಸ್ ಸೆಕ್ಷನ್ 35(3) ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಸಮನ್ಸ್ ನೀಡಿರುವುದು ಕಾನೂನುಬಾಹಿರ ಕ್ರಮವಾಗಿದೆ. ಅರ್ಜಿದಾರರು ಆರೋಪಿಗಳೂ ಅಲ್ಲ, ಸಾಕ್ಷಿಗಳೂ ಅಲ್ಲ. ಆದ್ದರಿಂದ, ನೋಟಿಸ್ ರದ್ದುಗೊಳಿಸಬೇಕೆಂದು ಕೋರಿದರು.
ರಾಜಕೀಯ ವೈರತ್ವ, ಧಾರ್ಮಿಕ ವೈರತ್ವ, ಸಂಘಟನಾತ್ಮಕ ವೈರತ್ವದಿಂದ ನೋಟಿಸ್‌ಗಳನ್ನು ನೀಡಲಾಗಿದೆ. ಇದೀಗ 10ನೇ ನೋಟಿಸ್ ನೀಡಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಕೂರಿಸುತ್ತಾರೆ. ಈಗಾಗಲೇ 150 ತಾಸಿಗೂ ಅಧಿಕ ಸಮಯ ದೂರುದಾರರನ್ನು ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ ಬಿಎನ್‌ಎಸ್ ಸೆಕ್ಷನ್ 211(ಎ) ಅಡಿ ಎಫ್ಐಆರ್ ದಾಖಲಿಸಿ ನಂತರ ಬೇರೆ ಬೇರೆ ಸೆಕ್ಷನ್‌ಗಳನ್ನು ಸೇರಿಸಿದ್ದಾರೆ. ಅದೂ ಎರಡೂವರೆ ತಿಂಗಳ ನಂತರ ಹೊಸ ಸೆಕ್ಷನ್ ಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.
ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೀಪಕ್ ಖೋಸ್ಲಾ, ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಿರುವುದೇ ಕಾನೂನುಬಾಹಿರವಾಗಿದೆ. ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೇ ಎಫ್ಐಆರ್ ದಾಖಲಿಸಬಾರದಿತ್ತು ಎಂದರು. ಆಗ ನ್ಯಾಯಮೂರ್ತಿಗಳು, ಇಷ್ಟೊಂದು ಪೊಲೀಸ್ ನೋಟಿಸ್ ಏಕೆ ಕೊಟ್ಟಿದ್ದೀರಿ? ಪ್ರತಿದಿನ ಒಂದೊಂದು ನೋಟಿಸ್ ನೀಡಿರುವುದು ಏಕೆ ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್. ಜಗದೀಶ್, ಅವರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಆರಂಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿತ್ತು. ಧರ್ಮಸ್ಥಳ ಗ್ರಾಮದ 20 ಸ್ಥಳಗಳಲ್ಲಿ ಅಗೆದು ಪರಿಶೀಲನೆ ನಡೆಸಲಾಯಿತು. ಆನಂತರ, ಆರೋಪ ಬಹುತೇಕ ಸುಳ್ಳೆಂದು ದೃಢಪಟ್ಟ ಹಿನ್ನೆಲೆಯಲ್ಲಿ ದೂರುದಾರರನ್ನು ಆರೋಪಿಗಳನ್ನಾಗಿ ಮಾಡಿ ನೋಟಿಸ್ ನೀಡಲಾಗಿದೆ ಎಂದರು.
ಅರ್ಜಿದಾರರಿಂದ ಕಾನೂನು ದುರ್ಬಳಕೆ; ಸರ್ಕಾರದ ಆಕ್ಷೇಪ:
ಪ್ರತ್ಯೇಕ ಎಫ್ಐಆರ್ ದಾಖಲಿಸಬಹುದಿತ್ತಲ್ಲವೇ ಎಂಬ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ಜಗದೀಶ್, ಈಗಾಗಲೇ ದಾಖಲಿಸಿರುವ ಎಫ್ಐಆರ್‌ನಲ್ಲೇ ತನಿಖೆ ಮುಂದುವರಿಸಬಹುದೆಂದು ಸುಪ್ರೀಂಕೋರ್ಟ್ ತೀರ್ಪಿದೆ. ಸೆಕ್ಷನ್ 35(3) ಅಡಿ ನೋಟಿಸ್ ಜಾರಿಗೊಳಿಸಿದ ಬಳಿಕ ಅರ್ಜಿದಾರರು ವಿಚಾರಣೆಗೆ ಹಾಜರಾಗಿಲ್ಲ. ಇದೀಗ ಹೊಸದಾಗಿ 35(3) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಅರ್ಜಿದಾರರು ನ್ಯಾಯಾಲಯ ಮತ್ತು ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಪ್ರಚೋದನೆ ಮೇರೆಗೆ ಚಿನ್ನಯ್ಯ ದೂರು ನೀಡಿದ್ದನು. ಇದೀಗ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಈ ಮೂಲಕ ರಾಜ್ಯದ ಆಡಳಿತಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ಷೇಪಿಸಿದರಲ್ಲದೆ, ಇಡೀ ವ್ಯವಸ್ಥೆಯ ಮೇಲೆ ಸವಾರಿ ಮಾಡಲು ಹೊರಟಿರುವ ಇಂಥವರ ವಿರುದ್ಧ ತನಿಖೆ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
Related Articles
Thank you for your comment. It is awaiting moderation.


Comments (0)