ಎಸ್‌ಐಟಿ ರಚನೆಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ; ಸರ್ಕಾರಿ ಭೂ ಒತ್ತುವರಿ ಪ್ರಕರಣದಲ್ಲಿ ಎಚ್‌ಡಿಕೆಗೆ ಮತ್ತೆ ಸಂಕಷ್ಟ

ಬೆಂಗಳೂರು: ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ಸೋಮವಾರ ತಡೆಯಾಜ್ಞೆ ನೀಡಿದೆ. ಇದರಿಂದ, ಎಸ್‌ಐಟಿಗೆ ತನಿಖೆ ಮುಂದುವರಿಸಲು ಹಾದಿ ಸುಗಮವಾಗಿದ್ದು, ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹಿರಿಯ ಐಎಎಸ್‌ ಅಧಿಕಾರಿ ಅಮಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿ 2025ರ ಜನವರಿ 28ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ‌ನೀಡಿದ್ದ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ತಡೆ ನೀಡಿತಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಈ ಪ್ರಕರಣದಲ್ಲಿ ಪ್ರತಿವಾದಿಗಳ ವಿರುದ್ಧ 6 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪವಿದೆ. ಆದ್ದರಿಂದ, ಒತ್ತುವರಿ ತೆರವುಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಆ ಬಗ್ಗೆ ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ, ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್‌ಐಟಿ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಎಸ್‌ಐಟಿ ರಚನೆಗೆ ಏಕಸದಸ್ಯ ಪೀಠ ತಡೆ ನೀಡಿದೆ. ಆದ್ದರಿಂದ, ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.

ಮನವಿ ಪರಿಗಣಿಸಿದ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ನವೆಂಬರ್ 26ರವರೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?
ಎಚ್‌.ಡಿ. ಕುಮಾರಸ್ವಾಮಿ ಮತ್ತವರ ಸಂಬಂಧಿಕರು ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳುವಂತೆ 2020ರಲ್ಲಿ ಹೈಕೋರ್ಟ್‌ ಆದೇಶಿಸಿತ್ತು. ನ್ಯಾಯಾಲಯದ ಈ ಆದೇಶ ಜಾರಿಯಾಗಿಲ್ಲ ಎಂದು ಆಕ್ಷೇಪಿಸಿ ಸರ್ಕಾರದ ವಿರುದ್ಧ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌, ಎಚ್‌ಡಿಕೆ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ್ದರು. ಅದನ್ನು ಹೈ‌ಕೋರ್ಟ್‌‌ನಲ್ಲಿ ಪ್ರಶ್ನಿಸಲಾಗಿತ್ತು.

ಆ ನಂತರ ಪ್ರಕರಣದ ಬಗ್ಗೆ ತನಿಖೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲು ಹಿರಿಯ ಐಎಎಸ್‌ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ಸರ್ಕಾರ ಆದೇಶಿಸಿತ್ತು. ಎಸ್‌ಐಟಿ ರಚನೆ ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ, ಸರ್ಕಾರದ ಆದೇಶ ರದ್ದುಗೊಳಿಸಬೇಕೆಂದು ಕೋರಿ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಮಧ್ಯಂತರ ತಡೆ ನೀಡಿದ್ದ ನ್ಯಾಯಾಲಯ:
ಎಚ್.ಡಿ. ಕುಮಾರಸ್ವಾಮಿ ಅವರ ಅರ್ಜಿಯನ್ನು ಜೂನ್ 19ರಂದು ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಯಾವುದೇ ರೀತಿಯ ಅಧಿಸೂಚನೆ ಪ್ರಕಟಿಸಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದ್ದರಿಂದ, ಎಸ್‌ಐಟಿ ರಚಿಸಿರುವ ಆದೇಶ ಮತ್ತು ಆನಂತರ ಕುಮಾರಸ್ವಾಮಿ ಅವರಿಗೆ ಜಾರಿ ಮಾಡಿರುವ ಸಮನ್ಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿತ್ತು. ಇದೇ ಆದೇಶ ತಮಗೂ ವಿಸ್ತರಿಸಬೇಕು ಎಂದು ಕೋರಿದ್ದ ಇತರ ಆರೋಪಿಗಳಾದ ಪ್ರಮೀಳಾ, ಡಿ.ಟಿ. ಸಂತೋಷ್‌ ಹಾಗೂ ಸುನಂದಾ ಅವರ ಮನವಿಯನ್ನು ಜುಲೈ 2ರಂದು ನ್ಯಾಯಾಲಯ ಪುರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

Related Articles

Comments (0)

Leave a Comment