ನಾಲ್ಕು ವರ್ಷದಿಂದ ನಡೆಯದ ಜಿ.ಪಂ., ತಾ.ಪಂ. ಚುನಾವಣೆ; ಸರ್ಕಾರದ ನಡೆಗೆ ಹೈಕೋರ್ಟ್ ಅಚ್ಚರಿ
- by Jagan Ramesh
- August 14, 2024
- 76 Views
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯದಿರುವ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರ ವಿಕೇಂದ್ರೀಕರಣಕ್ಕೆೆ ಸಂಬಂಧಿಸಿದ ಸವಿಂಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಏನಾದರೂ ಇದೆಯೇ ಎಂದು ರಾಜ್ಯ ಸರ್ಕಾರವನ್ನು ಮಾರ್ಮಿಕವಾಗಿ ಪ್ರಶ್ನಿಸಿದೆ.
ನ್ಯಾಯಾಲಯಕ್ಕೆೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ತಾ.ಪಂ. ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಮತ್ತೊಂದೆಡೆ, ನಗರ ಸ್ಥಳೀಯ ಸಂಸ್ಥೆೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ಪೀಠ ಹೊರಡಿಸಿರುವ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್ ವಾದ ಮಂಡಿಸಿ, ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಜಿ.ಪಂ. ಹಾಗೂ ತಾ.ಪಂ. ಗಳು ಆಡಳಿತಾಧಿಕಾರಿಗಳ ಅಧೀನದಲ್ಲಿವೆ. ಕಾನೂನಿನ ಪ್ರಕಾರ ಅವಧಿ ಮುಗಿಯುವ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂಬ ವಿಚಾರವನ್ನು ನ್ಯಾಯಪೀಠದ ಗಮನಕ್ಕೆೆ ತಂದರು.
ಆಗ ಮುಖ್ಯ ನ್ಯಾಯಮೂರ್ತಿಗಳು, ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿಲ್ಲವೇ ಅಚ್ಚರಿ ವ್ಯಕ್ತಪಡಿಸಿದರಲ್ಲದೆ, ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆೆಗಳಿಗೆ ಸ್ವಾಯತ್ತತೆ ನೀಡುವ, ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆೆ ವಿನಾಯಿತಿ ಏನಾದರೂ ಪಡೆದಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆೆ ಪ್ರತಿಕ್ರಿಯಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ಜಿ.ಪಂ., ತಾ.ಪಂ. ಚುನಾವಣೆ ವಿಳಂಬವಾಗಿದೆ. ಈಗಾಗಲೇ ರಾಜ್ಯದ ಎಲ್ಲ 31 ಜಿ.ಪಂ.ಗಳ ಕ್ಷೇತ್ರ ಮರುವಿಂಗಡಣೆ ಕಾರ್ಯ ಮುಗಿದಿದೆ. ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದಕ್ಕಾಗಿ ನಾಲ್ಕು ವಾರ ಕಾಲಾವಕಾಶಬೇಕು ಎಂದು ಕೋರಿದರು.
ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ನಿಗದಿಪಡಿಸುವುದು ಚುನಾವಣಾ ಆಯೋಗದ ಕೆಲಸವಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆೆ, ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ಮೊದಲು ಆ ಆಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ನಾವು ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿಸಿದ್ದೆವು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಆ ಆಧಿಕಾರವನ್ನು ಆಯೋಗದಿಂದ ಹಿಂಪಡೆದಿದೆ. ಆದ್ದರಿಂದ, ತಾ.ಪಂ., ಜಿ.ಪಂ. ಚುನಾವಣೆ ವಿಳಂವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. 12 ವಾರಗಳಲ್ಲಿ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆೆ ಭರವಸೆ ನೀಡಿತ್ತು. ಆದರೆ, ವರ್ಷ ಕಳೆದರೂ ಮಾಡಿಲ್ಲ. ಅದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ದಾಖಲಿಸಲಾಗಿದೆ ಎಂದು ತಿಳಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟಂಬರ್ 5ಕ್ಕೆೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)