ಸಾಂಪ್ರದಾಯಿಕ ಉಡುಪು ತೊಟ್ಟವರ ಪ್ರವೇಶಕ್ಕೆ ನಿರ್ಬಂಧ ಬೇಡ; ಮಹಾಮೃತ್ಯುಂಜಯ ದೇವಾಲಯದ ಆಡಳಿತ ಮಂಡಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿವಾದ ಹಾಗೂ ಜನಾಂಗೀಯ ಸಂಘರ್ಷಕ್ಕೆ ಕಾರಣವಾಗಿದ್ದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಸ್ಥಾನದ ವಸ್ತ್ರ ಸಂಹಿತೆಗೆ ಮಧ್ಯಂತರ ತಡೆ ನೀಡಿರುವ ಹೈಕೋರ್ಟ್, ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಬರುವ ಯಾವುದೇ ವ್ಯಕ್ತಿಗೆ ದೇವಾಲಯದ ಆವರಣ ಪ್ರವೇಶಿಸುವುದಕ್ಕೆ ನಿರ್ಬಂಧ ಹೇರಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿಗೆ ನಿರ್ದೇಶಿಸಿದೆ.

ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ದೇವಸ್ಥಾನದ ಬೈಲಾದಲ್ಲಿರುವ ವಿವಾದಾತ್ಮಕ ಅಂಶಗಳನ್ನು ಆಕ್ಷೇಪಿಸಿ ಮಡಿಕೇರಿ ನಿವಾಸಿ ಸಿ.ಎ ಸಂಜು ಹಾಗೂ ವಿರಾಜಪೇಟೆ ನಿವಾಸಿ ಅಮಿತ್ ಪಿ. ಭೀಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿ ಕುರಿತು ವಾದ ಆಲಿಸಿದ ನ್ಯಾಯಪೀಠ, ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಬರುವ ಯಾವುದೇ ವ್ಯಕ್ತಿಗೆ ದೇವಾಲಯದ ಆವರಣ ಪ್ರವೇಶಕ್ಕೆ ನಿರ್ಬಂಧ ವಿಧಿಸಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿಗೆ ಪದಾಧಿಕಾರಿಗಳಿಗೆ ನಿರ್ದೇಶನ ನೀಡಿತಲ್ಲದೆ, ಅರ್ಜಿ ಸಂಬಂಧ ಕೊಡಗು ಸಹಕಾರ ಸಂಘಗಳ ಉಪ ನೋಂದಣಾಧಿಕಾರಿ, ಕಟ್ಟೆಮಾಡು ಮಹಾಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿ, ಕೊಡಗು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿಗೊಳಿಸಿಗೊಳಿಸಿ, ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?
ದೇವಸ್ಥಾನದ ಹಾಲಿ ಆಡಳಿತ ಮಂಡಳಿಗೆ ಜಿಲ್ಲಾ ಉಪ ನೋಂದಣಾಧಿಕಾರಿಗಳು 2024ರ ಅಕ್ಟೋಬರ್ 10ರಂದು ನೀಡಿರುವ ನೋಂದಣಿ ಪ್ರಮಾಣಪತ್ರ ರದ್ದುಪಡಿಸಬೇಕು. ಆಡಳಿತ ಮಂಡಳಿ ರೂಪಿಸಿರುವ ಬೈಲಾದಲ್ಲಿರುವ ವಸ್ತ್ರಸಂಹಿತೆಗೆ ಸಂಬಂಧಿಸಿದ ಸೆಕ್ಷನ್ 4(7) ಜಾರಿಗೆ ತಡೆ ನೀಡಬೇಕು. ಸಾಂಪ್ರದಾಯಿಕ ಉಡುಪು ಧರಿಸಿ ಬರುವ ಕೊಡವ ಹಾಗೂ ಕೊಡವ ಭಾಷಿಕ ಜನರಿಗೆ ಮಹಾಮೃತ್ಯುಂಜಯ ದೇವಸ್ಥಾನ ಪ್ರವೇಶ ನಿರ್ಬಂಧಿಸದಂತೆ ಹಾಗೂ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲು ಅಡ್ಡಿಪಡಿಸದಂತೆ ದೇವಾಲಯದ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Related Articles

Comments (0)

Leave a Comment