ಕೆಆರ್‌ಎಸ್ ಜಲಾಶಯದ ಸುರಕ್ಷತೆ; ಸರ್ಕಾರದಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು: ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿಯ ಬೃಂದಾವನ ಗಾರ್ಡನ್ ಅಭಿವೃದ್ದಿಯ ಹೆಸರಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಲಹೆ ಹಾಗೂ ಅನುಮತಿ ಪಡೆಯಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಮನರಂಜನಾ ಪಾರ್ಕ್ ಹಾಗೂ ಪ್ರತಿಮೆ ಸ್ಥಾಪನೆಗೆ ಕರೆದಿರುವ ಟೆಂಡರ್ ರದ್ದು ಕೋರಿ ಮಂಡ್ಯ ಜಿಲ್ಲೆಯ ಕೆ. ಬೋರಯ್ಯ ಹಾಗೂ ಇತರರು ಮತ್ತು ಕಾವೇರಿ ಆರತಿ ಆಯೋಜನೆಯನ್ನು ಆಕ್ಷೇಪಿಸಿ ರೈತ ನಾಯಕಿ ಸುನಂದಾ ಜಯರಾಮ್ ಸಲ್ಲಿಸಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್‌ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ವಾದ ಮಂಡಿಸಿ ಜಲಾಶಯದ ಬಳಿ 120 ಅಡಿ ಎತ್ತರದ ಕಾವೇರಿ ಪ್ರತಿಮೆ ಸ್ಥಾಪಿಸಲಾಗುತ್ತಿದೆ. ಇದಕ್ಕೆೆ ಯಾವುದೇ ತಜ್ಞರು ಅಥವಾ ತಂತ್ರಜ್ಞರ ಸಲಹೆ ಪಡೆದುಕೊಳ್ಳಲಾಗಿಲ್ಲ. ಅದಾಗ್ಯೂ, ನಿರ್ಮಾಣ ಕಾಮಗಾರಿ ನಿರಂತರವಾಗಿ ನಡೆದಿದೆ ಎಂದು ಆಕ್ಷೇಪಿಸಿದರಲ್ಲದೆ, ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಕಾವೇರಿ ನೀರಾವರಿ ನಿಗಮದ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡಿಸಿ, ಕಾವೇರಿ ಪ್ರತಿಮೆ ಸ್ಥಾಪನೆಗೆ ಟೆಂಡರ್ ನೀಡಲಾಗಿದ್ದು, ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು.

ಆಗ ನ್ಯಾಯಪೀಠ, ಕಾಮಗಾರಿಗೆ ಭೂಮಿ ಅಗೆಯುವುದರಿಂದ ಜಲಾಶಯಕ್ಕೆ ಹಾನಿಯಾಗುವುದಿಲ್ಲವೇ? ಜಲಾಶಯ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸಲು ತಜ್ಞರ ಸಲಹೆಗಳನ್ನು ಪಾಲಿಸಲಾಗಿದೆಯೇ ಎಂದು ಪ್ರಶ್ನಿಸಿತು.

ಈ ಬಗ್ಗೆ ಮಾಹಿತಿ ಸಲ್ಲಿಸಲು 10 ದಿನ ಕಾಲಾವಕಾಶ ಬೇಕೆಂದು ಅಡ್ವೊಕೇಟ್ ಜನರಲ್ ಹೇಳಿದರು. ನ್ಯಾಯಾಲಯ ಕೇಳಿರುವ ಪ್ರಶ್ನೆಗಳಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿತು.

ಇದೇ ವೇಳೆ, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ, ಕಾವೇರಿ ನೀರಾವರಿ ನಿಗಮ, ಜಲಾಶಯ ಸುರಕ್ಷತಾ ಸಮಿತಿ ಸೇರಿ ಅರ್ಜಿಯಲ್ಲಿನ ಪ್ರತಿವಾದಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತು.

 

Related Articles

Comments (0)

Leave a Comment