ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ; ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ, ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಆಗಸ್ಟ್ 17ರಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.

ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದೆ. ನ್ಯಾಯಾಲಯದ ವಿಸ್ತೃತ ತೀರ್ಪಿನ ಪ್ರತಿ ಪ್ರಕಟಗೊಂಡ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. ಇನ್ನು ಹೈಕೋರ್ಟ್‌ನ ಈ ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾದಂತಾಗಿದೆ‌.

ಸಿದ್ದರಾಮಯ್ಯ ಅವರ ವಾದವೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡಲಾಗಿದ್ದ ಶೋಕಾಸ್‌ ನೋಟಿಸ್‌ ಹಿಂಪಡೆಯುವ ಸಂಬಂಧ ರಾಜ್ಯ ಸಚಿವ ಸಂಪುಟ ಮಾಡಿದ್ದ ಶಿಫಾರಸಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ಎದ್ದು ಕಾಣುವ ಅತಾರ್ಕಿಕ ಅಂಶಗಳನ್ನು ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಆದೇಶದಲ್ಲಿ ಪಟ್ಟಿ ಮಾಡಿಲ್ಲ. ಬದಲಾಗಿ, ಸಂಪುಟದ ಶಿಫಾರಸು ಪಕ್ಷಪಾತದಿಂದ ಕೂಡಿದೆ ಎಂದಷ್ಟೇ ರಾಜ್ಯಪಾಲರು ಹೇಳಿದ್ದಾರೆ. ಆ ಮೂಲಕ ಸ್ವತಂತ್ರವಾಗಿ ವಿವೇಚನೆ ಬಳಸಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆ ಸೆಕ್ಷನ್‌ 17ಎ ಅಡಿ ತನಿಖೆಗೆ ಅನುಮತಿಸುವಾಗ ತನಿಖಾಧಿಕಾರಿ ಅಭಿಪ್ರಾಯ ರೂಪಿಸಿರಬೇಕು. ಹಾಲಿ ಪ್ರಕರಣದಲ್ಲಿ ಈ ನಿಯಮವೂ ಅನುಪಾಲನೆಯಾಗಿಲ್ಲ. ಆದ್ದರಿಂದ, ರಾಜ್ಯಪಾಲರ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

ಸಿಎಂ ಪರವಾಗಿ ವಾದ ಮಂಡಿಸಿದ್ದ ಮತ್ತೊಬ್ಬ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್‌, ಕೆಸರೆ ಗ್ರಾಮದಲ್ಲಿನ ವಿವಾದಿತ ಸರ್ವೆ ಸಂಖ್ಯೆ 464ರಲ್ಲಿನ 3.16 ಗುಂಟೆ ಭೂಮಿಯನ್ನು ಮುಡಾ ಡಿನೋಟಿಫೈ ಮಾಡಿದ್ದು, ದೇವನೂರು ಲೇಔಟ್‌ ರೂಪಿಸುವಾಗ ಅದನ್ನು ವಶಕ್ಕೆ ಪಡೆಯಲಾಗಿಲ್ಲ. ಸಿದ್ದರಾಮಯ್ಯನವರ ಬಾವಮೈದುನನಿಗೆ ಅದನ್ನು ಮಾರಾಟ ಮಾಡುವಾಗ ಅದರ ಒಡೆತನ ಮೂಲ ಭೂಮಾಲೀಕರ ಬಳಿಯೇ ಇತ್ತೇ ಹೊರತು ಮುಡಾ ಬಳಿ ಅಲ್ಲ. ಆ ವೇಳೆ ಅದು ಕೃಷಿ ಭೂಮಿಯೇ ಆಗಿತ್ತು. ವಿವಾದಿತ ಭೂಮಿಯನ್ನು ಮುಡಾ ತನ್ನ ವಶಕ್ಕೆ ಪಡೆದಿರಲಿಲ್ಲ. 1993ರಲ್ಲಿ ವಿವಾದಿತ ಭೂಮಿಯೂ ಸೇರಿ ಹಲವು ಜಮೀನುಗಳನ್ನು ವಶಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಮುಡಾ ಒಟ್ಟಾರೆಯಾಗಿ 1 ಕೋಟಿ ರೂ. ಗಳಿಗೂ ಅಧಿಕ ಪರಿಹಾರ ನೀಡಿತ್ತು. ದೂರುದಾರರು ಕೆಸರೆ ಗ್ರಾಮವೇ ಅಸ್ತಿತ್ವದಲ್ಲಿಲ್ಲ ಎಂದು ವಾದಿಸಿದ್ದಾರೆ. 2011ರ ಜನಗಣತಿಯ ಪ್ರಕಾರ ಕೆಸರೆ ಗ್ರಾಮ ಇದ್ದು, ಅಲ್ಲಿ ಜನವಸತಿ ಮತ್ತು ಆಸ್ಪತ್ರೆ ಇತ್ಯಾದಿಗಳು ಇದ್ದವು. ಇದಕ್ಕೆ ಸಂಬಂಧಿಸಿದಂತೆ ಜನಗಣತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದಿದ್ದರು.

ರಾಜ್ಯಪಾಲರ ಪ್ರತಿವಾದ:
ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿ ಪರವಾಗಿ ವಾದ ಮಂಡಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಪ್ರಕರಣದಲ್ಲಿ ರಾಜ್ಯಪಾಲರು ಸಂಪುಟ ಸಭೆಯ ಶಿಫಾರಸನ್ನು ಆಧರಿಸಬೇಕಿಲ್ಲ. ಮೇಲ್ನೋಟಕ್ಕೆ ತನಿಖಾ ಸಂಸ್ಥೆಯು ಕಾನೂನಿನ ಅಡಿ ಪ್ರಕರಣದ ತನಿಖೆ ನಡೆಸಬೇಕಿದೆಯೇ ಎಂಬುದರ ಪ್ರಕಾರ ರಾಜ್ಯಪಾಲರು ಮುನ್ನಡೆದಿದ್ದಾರೆ. ರಾಜ್ಯಪಾಲರದ್ದು ವಾಸ್ತವಿಕ ಅಂಶಗಳನ್ನು ಆಧರಿಸಿರುವ ವಿವೇಚನಾಯುತ ನಿರ್ಧಾರವಾಗಿದೆ. ಪಿಸಿ ಕಾಯ್ದೆ ಸೆಕ್ಷನ್‌ 17ಎ ಎಲ್ಲ ಕಡೆ ಅನ್ವಯವಾಗುತ್ತದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದೂರನ್ನು ಓದಿದ ಬಳಿಕ, ಮೇಲ್ನೋಟಕ್ಕೆ ಅಧಿಕಾರ ದುರ್ಬಳಕೆ ಕಂಡು ಬಂದಿರುವುದರಿಂದ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಪಿಸಿ ಕಾಯ್ದೆ ಸೆಕ್ಷನ್‌ 17ಎ ಅಧಿಕಾರದ ಮೂಲ ಗುಣವೇ ಕಾರ್ಯಕಾರಿ ಮತ್ತು ಆಡಳಿತಾತ್ಮಕವಾಗಿದೆ. ಇದರ ಅಡಿ ಅನುಮತಿ ನೀಡುವಾಗ ಆರೋಪಿಯ ವಾದ ಆಲಿಸಬೇಕಿಲ್ಲ. ಸೆಕ್ಷನ್‌ 17ಎ ಹಂತದಲ್ಲಿ ಸಹಜ ನ್ಯಾಯ ತತ್ವ ಅನ್ವಯಿಸುವುದಿಲ್ಲ. ಸೆಕ್ಷನ್‌ 19ರ ಹಂತದಲ್ಲೂ ಸಹಜ ನ್ಯಾಯ ತತ್ವ ಅನ್ವಯಿಸದು. ಸಂಪುಟ ಸಭೆಯ ನಿರ್ಣಯ ಏಕೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ರಾಜ್ಯಪಾಲರು ತಮ್ಮದೇ ಟಿಪ್ಪಣಿ ಮಾಡಿದ್ದಾರೆ. ರಾಜ್ಯಪಾಲರ ಆದೇಶ ವಿವೇಚನಾರಹಿತವಾಗಿದೆ ಎಂಬ ಅರ್ಜಿದಾರರ ವಾದ ಸತ್ಯಕ್ಕೆ‌ ದೂರವಾಗಿದೆ ಎಂದು ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

ಸರ್ಕಾರದ ವಾದ ಹೀಗಿತ್ತು:
ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡುವುದಕ್ಕೂ ಮುನ್ನ ತನಿಖಾಧಿಕಾರಿಯ ಪ್ರಾಥಮಿಕ ತನಿಖಾ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರವಾದ ರಾಜ್ಯಪಾಲರು ನಿರ್ಧರಿಸಬೇಕಿತ್ತು. ಆದರೆ, ರಾಜ್ಯಪಾಲರು ತಾವೇ ತನಿಖಾಧಿಕಾರಿಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ತನಿಖಾಧಿಕಾರಿಯ ಯಾವುದೇ ಪ್ರಾಥಮಿಕ ತನಿಖೆಯ ಆಧಾರವಿಲ್ಲದೇ ಪಿಸಿ ಕಾಯ್ದೆ ಸೆಕ್ಷನ್‌ 17 ಎ ಅಡಿಯಲ್ಲಿ ಅನುಮತಿ ನೀಡಿರುವುದು ಅಪಕ್ವವಾದ ಆದೇಶವಾಗಿದೆ. ಕೇವಲ ತರಾತುರಿಯಲ್ಲಿ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ. ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿಲ್ಲ. ಹೀಗಾಗಿ, ಅವರ ಅನುಮತಿ ಕಾನೂನುಬಾಹಿರವಾಗಿದೆ ಎಂದು ಆಕ್ಷೇಪಿಸಿದ್ದರು.

ದೂರುದಾರರ ವಾದ:
ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮಣೀಂದರ್‌ ಸಿಂಗ್‌, ತನಿಖೆಗೆ ಇದು ಸೂಕ್ತವಾದ ಪ್ರಕರಣ. ಸರ್ಕಾರದ ಎಲ್ಲ ವಿಭಾಗಗಳು ಒಂದೇ ರೀತಿಯ ಪ್ರತಿಕ್ರಿಯೆ ಸಲ್ಲಿಸಿದರೆ ರಾಜ್ಯ ಸರ್ಕಾರದ ಅಂಗ ಸಂಸ್ಥೆ ಹೇಗೆ ತನಿಖೆ ನಡೆಸುತ್ತದೆ? ಭೂಮಿಯ ಡಿನೋಟಿಫಿಕೇಶನ್‌ ಒಪ್ಪಬೇಕೇ ಅಥವಾ ಬೇಡವೇ ಎಂಬ ವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನಿರ್ಧರಿಸಬೇಕಿದೆ. ಇದೇ ತನಿಖೆಯ ವಸ್ತುವಾಗಿರಲಿದೆ ಎಂದು ವಿವರಿಸಿದ್ದರು.

ಸ್ನೇಹಮಯಿ ಕೃಷ್ಣ ಪರವಾಗಿ ಮತ್ತೊಬ್ಬ ಹಿರಿಯ ವಕೀಲ ಕೆ.ಜಿ. ರಾಘವನ್‌ ವಾದ ಮಂಡಿಸಿ, ಸಾರ್ವಜನಿಕ ಹಿತಾಸಕ್ತಿ ಅಡಗಿರುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶ ಹೊಂದಲಾಗಿದೆ. ಮಾಧ್ಯಮಗಳಲ್ಲಿ ಮುಡಾ ಹಗರಣ ವರದಿಯಾದ ಬೆನ್ನಿಗೇ ರಾಜ್ಯ ಸರ್ಕಾರ ಐಎಎಸ್‌ ಅಧಿಕಾರಿ (ವೆಂಕಟಾಚಲಪತಿ) ನೇತೃತ್ವದಲ್ಲಿ ಆನಂತರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ (ಪಿ.ಎನ್‌. ದೇಸಾಯಿ) ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದೆ. ಇದು ಸಾರ್ವಜನಿಕ ನಂಬಿಕೆ ಹಾಳಾಗಿರುವುದಕ್ಕೆ ಉತ್ತರವಾಗಿದೆ. ಉನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿರುವ ವ್ಯಕ್ತಿಯ ವಿರುದ್ಧ ತನಿಖೆ ಕೋರಲಾಗಿದೆ. ಕೊನೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಮುಕ್ತವಾಗಬಹುದು. ಆದರೆ, ನ್ಯಾಯಾಲಯವು ಇಂಥ ವಿಚಾರಗಳಲ್ಲಿ ತನಿಖೆಗೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

ಮತ್ತೊಬ್ಬ ದೂರುದಾರ ಪಿ. ಎಸ್‌. ಪ್ರದೀಪ್‌ ಕುಮಾರ್‌ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ತಮ್ಮ ಹಿತಾಸಕ್ತಿಯ ಕಾರಣಕ್ಕೆ ಸಂಪುಟದ ಸಚಿವರು ಪ್ರಕರಣದಲ್ಲಿ ಪಕ್ಷಪಾತಿಗಳಾಗುವ ಸಾಧ್ಯತೆಯಿಂದಾಗಿ ರಾಜ್ಯಪಾಲರಿಗೆ ಸಲಹೆ ನೀಡುವ ಅಧಿಕಾರದಿಂದ ವಂಚಿತರಾಗುತ್ತಾರೆ. ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನುಸಾರ ಕರ್ತವ್ಯವನ್ನು ನಿರ್ವಹಿಸುವುದು ಮಾತ್ರವೇ ಅಲ್ಲದೆ ಸಂವಿಧಾನದ ರಕ್ಷಕರಾಗಿಯೂ ತಮ್ಮ ಕಚೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಿರುತ್ತಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

Related Articles

Comments (0)

Leave a Comment