ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಆಕ್ಷೇಪಿಸಿದ್ದ ಪಿಐಎಲ್ ವಜಾ
- by Jagan Ramesh
- September 12, 2025
- 19 Views

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನ ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಿಲ್ಲಾಧಿಕಾರಿಯ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ದಾವಣಗೆರೆ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ರದ್ದು ಕೋರಿ ಎಚ್. ಸುರೇಶ್ ಸೇರಿ 13 ಮಂದಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪರಿಗಣಿಸುವಂತಹ ಯಾವುದೇ ಅಂಶಗಳಿಲ್ಲ. ಜತೆಗೆ ಇದು ನೀತಿ-ನಿರೂಪಣೆ ವಿಚಾರ, ಇದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು ಎಂದು ತಿಳಿಸಿ, ಅರ್ಜಿ ವಜಾಗೊಳಿಸಿತು.
ಸದ್ಯ ಶಾಲಾ ಆವರಣದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿದೆ ಹಾಗೂ ಶಾಲೆಯಲ್ಲಿ ಕೇವಲ 12 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಅವರನ್ನು ಬೇರೆ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರಿ ವಕೀಲರು ಹೇಳಿದ್ದಾರೆ. ಜತೆಗೆ, ಒಂದು ಎಕರೆ 33 ಗುಂಟೆ ಜಾಗದಲ್ಲಿ ಕೇವಲ 60×60 ಜಾಗವನ್ನು ಮಾತ್ರ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಊಟ-ತಿಂಡಿ ಒದಗಿಸಲು ಕ್ಯಾಂಟೀನ್ಗೆ ಬಳಸಿಕೊಳ್ಳಲು ಉದ್ದೇಶಿಸಿದೆ. ಆದ್ದರಿಂದ, ಅರ್ಜಿ ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಹೇಳಿತು.
ಅರ್ಜಿದಾರರ ವಾದವೇನು?
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಶಾಲೆಗೆ ಸೇರಿದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ನಿರ್ಧರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದರೆ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಶಾಲೆಯ ಜಾಗವನ್ನು ಕ್ಯಾಂಟೀನ್ ನಿರ್ಮಾಣಕ್ಕೆ ಬಳಸದಂತೆ ನಿರ್ಣಯ ಕೈಗೊಂಡಿದೆ. ಆ ನಿರ್ಧಾರವನ್ನು ಪರಿಗಣಿಸದೆ ಕ್ಯಾಂಟೀನ್ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂಲತಃ ಶಿಕ್ಷಣದ ಜಾಗವನ್ನು ಬೇರೆ ಉದ್ದೇಶಕ್ಕೆ ಕೊಟ್ಟರೆ ಉಳಿದ ಜಾಗವನ್ನೂ ತಮ್ಮ ವಶಕ್ಕೆ ಪಡೆಯಲು ಬೇರೆ ಬೇರೆ ಇಲಾಖೆಗಳು ಹವಣಿಸುತ್ತಿದ್ದು, ಅದಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಈ ವಾದವನ್ನು ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ಶಾಲೆಗೆ ಸೇರಿದ 1 ಎಕರೆ 33 ಗುಂಟೆ ಜಾಗದಲ್ಲಿ ಒಂದು ಹಳೆಯ ಕಟ್ಟಡವಿದ್ದು, ಅದು ಶಿಥಿಲಾವಸ್ಥೆಯಲ್ಲಿದ್ದ ಕಾರಣ ಹೊಸ ಕಟ್ಟಡ ನಿರ್ಮಿಸಿ ಅಲ್ಲಿದ್ದ 12 ಮಕ್ಕಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಸದ್ಯ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲು ಕ್ಯಾಂಟೀನ್ ನಿರ್ಮಾಣಕ್ಕೆ ಸಣ್ಣ ಜಾಗ ಮಾತ್ರ ಬಳಕೆ ಮಾಡಲಾಗುತ್ತಿದ್ದು, ಉಳಿದ ಜಾಗ ಶಾಲೆಯ ಸುರ್ಪದಿಯಲ್ಲಿಯೇ ಇರಲಿದೆ ಎಂದು ತಿಳಿಸಿದರು.
Related Articles
Thank you for your comment. It is awaiting moderation.
Comments (0)