ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಜಾಮೀನು ಅರ್ಜಿ; ಇಡಿಗೆ ಹೈಕೋರ್ಟ್ ನೋಟಿಸ್
- by Prashanth Basavapatna
- May 27, 2025
- 108 Views

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ವಂಚನೆ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಂಜುನಾಥಗೌಡ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಯಾದ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಕಲಿ ಚಿನ್ನ ಅಡಮಾನವಿಟ್ಟು 62.77 ಕೋಟಿ ರೂ. ಸಾಲ ಪಡೆದು ವಂಚಿಸಿದ ಹಗರಣಕ್ಕೆ ಸಂಬಂಧಿಸಿದಂತೆ 2014ರಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು 2014ರ ಅಕ್ಟೋಬರ್ 18ರಂದು ವಿಚಾರಣಾ ನ್ಯಾಯಾಲಯಕ್ಕೆ ಮೊದಲ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ 1997ರಿಂದ 2020ರವರೆಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್.ಎಂ. ಮಂಜುನಾಥ ಗೌಡ ಅವರಿಗೆ 2023ರ ಅಕ್ಟೋಬರ್ 6ರಂದು ಇಡಿ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ರದ್ದುಕೋರಿ ಮಂಜುನಾಥ ಗೌಡ ಸಲ್ಲಿಸಿದ್ದ ಅರ್ಜಿ ಹಾಗೂ ಮೇಲ್ಮನವಿಗಳನ್ನು ಕ್ರಮವಾಗಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹಾಗೂ ವಿಭಾಗೀಯ ನ್ಯಾಯಪೀಠಗಳು ವಜಾಗೊಳಿಸಿದ್ದವು. 2024ರ ಏಪ್ರಿಲ್ 9ರಂದು ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
Related Articles
Thank you for your comment. It is awaiting moderation.
Comments (0)