ಬಾಕಿ ಅನುದಾನ ಬಿಡುಗಡೆ ಕೋರಿ ಗಾಣಿಗ ಚಾರಿಟಬಲ್ ಟ್ರಸ್ಟ್ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ವಿಶ್ವ ಗಾಣಿಗ ಸಮುದಾಯ ಚಾರಿಟಬಲ್ ಟ್ರಸ್ಟ್‌ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 3.50 ಕೋಟಿ ರೂ. ಅನುದಾನದಲ್ಲಿ ಬಾಕಿ 1.50 ಕೋಟಿ ರೂ. ಬಿಡುಗಡೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೂರ್ಣಾನಂದಪುರಿ ಮಹಾಸ್ವಾಮೀಜಿ (ಬಿ.ಜೆ. ಪುಟ್ಟಸ್ವಾಮಿ) ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಿರುವುದನ್ನು ಗಮನಿಸಿದ ನ್ಯಾಯಪೀಠ, ಸಚಿವರನ್ನು ಪ್ರತಿವಾದಿಯನ್ನಾಗಿ ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಸದ್ಯ ಕಡತ ಸಚಿವರ ಬಳಿ ಇದೆ. ಅದನ್ನು ಅವರು ಇಲಾಖೆಯ ಕಾರ್ಯದರ್ಶಿಗೆ ಕಳುಹಿಸಬೇಕಾಗಿದೆ. ಈ ಕಾರಣಕ್ಕೆ ಸಚಿವರನ್ನು ಅರ್ಜಿಯಲ್ಲಿ ಪ್ರತಿವಾದಿ ಮಾಡಲಾಗಿದೆ. ನ್ಯಾಯಾಲಯ ಸೂಚಿಸಿದರೆ ಅವರನ್ನು ಪ್ರತಿವಾದಿ ಪಟ್ಟಿಯಿಂದ ಕೈಬಿಡಲಾಗುವುದು ಎಂದರು.

ಅಂತಿಮವಾಗಿ ಸಚಿವರ ಹೆಸರನ್ನು ಪ್ರತಿವಾದಿ ಪಟ್ಟಿಯಿಂದ ತೆಗೆಯುವಂತೆ ಸೂಚಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಫೆಬ್ರವರಿ 21ಕ್ಕೆ ಮುಂದೂಡಿತು.

ಪ್ರಕರಣವೇನು?
ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್‌ಗೆ ರಾಜ್ಯ ಸರ್ಕಾರ ಕಳೆದ ಬಜೆಟ್‌ನ್‌ನಲ್ಲಿ 3.50 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ಮುಖ್ಯಮಂತ್ರಿಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ಸಹ ನೀಡಿತ್ತು. ಅದರಂತೆ, 2023ರ ಜನವರಿ 18ರಂದು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬಾಕಿ ಮೊತ್ತ 1.50 ಕೋಟಿ ರೂ. ಬಿಡುಗಡೆ ಮಾಡುವಂತೆ 2023ರ ಜೂನ್ 7ರಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ. ಆದರೆ, ಈವರೆಗೂ ಹಣ ಬಿಡುಗಡೆ ಮಾಡಿಲ್ಲ. 3.50 ಕೋಟಿ ಹಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ಹಣದ ಅಗತ್ಯವಿದೆ. ಆದ್ದರಿಂದ, ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

Related Articles

Comments (0)

Leave a Comment