ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಪ್ರಶ್ನಿಸಿ ಪಿಐಎಲ್; ಸರ್ಕಾರ, ಎಂಇಎಸ್‌ಗೆ ಹೈಕೋರ್ಟ್ ನೋಟಿಸ್
- by Jagan Ramesh
- October 30, 2024
- 226 Views
ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸಲು ಉದ್ದೇಶಿಸಿರುವ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ಹೊರಡಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಹಾಗೂ ಎಂಇಎಸ್‌ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.
ಈ ವೇಳೆ ನ್ಯಾಯಪೀಠ, ಸಂವಿಧಾನ ಮತ್ತು ಮಾನವ ಹಕ್ಕುಗಳನ್ನು ಒಪ್ಪಿಕೊಂಡ ಬಳಿಕ ಎಲ್ಲರೂ ಅದಕ್ಕೆ ಬದ್ಧವಾಗಿರಬೇಕು ಎಂದು ಮೌಖಿಕವಾಗಿ ನುಡಿಯಿತು.
ಅರ್ಜಿದಾರರ ವಾದವೇನು?
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಎನ್.ಪಿ. ಅಮೃತೇಶ್ ವಾದ ಮಂಡಿಸಿ, 2019ರಿಂದ ಕನ್ನಡ ರಾಜ್ಯೋತ್ಸವ ವಿರೋಧಿಸಿ ಎಂಇಎಸ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಗೆ ಗನ್ ಕೊಂಡೊಯ್ಯಲಾಗಿದೆ. ಸರ್ಕಾರ ಅನುಮತಿ ನೀಡದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್ ಪ್ರದರ್ಶಿಸುತ್ತಾ ಬಂದಿದೆ. ಇಂಥವರ ವಿರುದ್ಧ ಪೊಲೀಸರು ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಿ ಸುಮ್ಮನಾಗುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ರಾಜ್ಯ ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಬರ್, ಹೈಕೋರ್ಟ್‌ನ ಸಮನ್ವಯ ಪೀಠವು ಕನ್ನಡ ರಾಜ್ಯೋತ್ಸವನ್ನು ನಿರಾತಂಕವಾಗಿ ನಡೆಸಲು ಸರ್ಕಾರ ಮತ್ತು ಪೊಲೀಸರು ಕ್ರಮಕೈಗೊಳ್ಳಬೇಕು. ಕಾನೂನುಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಬೇಕು ಎಂದು ಆದೇಶಿಸಿದೆ. ಈ ಆದೇಶದ ಅನ್ವಯ ಮುಚ್ಚಳಿಕೆ ನೀಡಲು ಸಿದ್ಧವಿದ್ದೇವೆ. ಆದ್ದರಿಂದ, ಪಿಐಎಲ್ ಸಲ್ಲಿಸುವ ಸನ್ನಿವೇಶವೇ ಉದ್ಭವಿಸಿಲ್ಲ. ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಲಾಗಿದ್ದು, ಅದನ್ನು ವಜಾಗೊಳಿಸಬೇಕು ಎಂದು ಮನವಿ ಕೋರಿದರು.
ಇದಕ್ಕೆ ಆಕ್ಷೇಪಿಸಿದ ಅಮೃತೇಶ್, ಸರ್ಕಾರದ ಎಚ್ಚರಿಕೆಗೆ ಎಂಇಎಸ್ ಕಾರ್ಯಕರ್ತರು ಕವಡೆ ಕಿಮ್ಮತ್ತು ನೀಡುತ್ತಿಲ್ಲ. ಕಳೆದ ಮೂರ್ನಾಲ್ಕು ವರ್ಷಗಳಿಂದ ದುರ್ವರ್ತನೆ ತೋರುತ್ತಲೇ ಬಂದಿದ್ದಾರೆ. ಮಾರಕಾಸ್ತ್ರಗಳನ್ನು ಪ್ರತಿಭಟನೆಗೆ ಕೊಂಡೊಯ್ಯಲಾಗುತ್ತಿದೆ. ಎಂಇಎಸ್ ಅಧ್ಯಕ್ಷ ಮನೋಜರ್ ಕಿಣೇಕರ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವದ ಬಳಿಕ ಮಾಧ್ಯಮಗಳ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಅರ್ಜಿಯನ್ನು ಬಾಕಿ ಉಳಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಕೋರಿದರು.
Related Articles
Thank you for your comment. It is awaiting moderation.
Comments (0)