ಬೈಕ್ ಟ್ಯಾಕ್ಸಿ ಸೇವೆ ನೀಡುವವರಿಗೆ ಕಿರುಕುಳ ಬೇಡ; ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆ ನೀಡುವ ಚಾಲಕರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಮೌಖಿಕ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ಕಲಾಪ ಆರಂಭವಾದಾಗ ಅಡ್ವೊಕೇಟ್‌ ಜನರಲ್ ಕೆ. ಶಶಿಕಿರಣ್‌ ಶೆಟ್ಟಿ ಹಾಜರಾಗಿ, ಅಪ್ಲಿಕೇಶನ್‌ ಆಧಾರಿತ ಬೈಕ್‌ ಟ್ಯಾಕ್ಸಿ ಸೇವೆ ನೀಡುವವರು ಸೇವೆ ಆರಂಭಿಸಿದ್ದಾರೆ. ಕ್ರಮ ತೆಗೆದುಕೊಳ್ಳುವುದಕ್ಕೂ ಮುನ್ನ ನ್ಯಾಯಾಲಯದ ಗಮನಕ್ಕೆ ತರುವುದು ನನ್ನ ಕರ್ತವ್ಯ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾವು ಯಾವುದೇ ಆದೇಶ ಮಾಡಿಲ್ಲ. ಸರ್ಕಾರ ಏನು ಕ್ರಮ ತೆಗೆದುಕೊಳ್ಳಬೇಕು ಎಂದುಕೊಂಡಿದೆಯೋ ಅದನ್ನು ಕೈಕೊಳ್ಳಬಹುದು. ಆದರೆ, ವ್ಯಕ್ತಿಗತ ಬೈಕ್‌ ಟ್ಯಾಕ್ಸಿ ಬಗ್ಗೆ ಯಾವುದೇ ಕ್ರಮ ಬೇಡ. ಅಗ್ರಿಗೇಟರ್ಸ್‌ಗೆ ಸಂಬಂಧಿಸಿದಂತೆ ನೀವು ನೀತಿ ರೂಪಿಸುವುದನ್ನು ಪರಿಗಣಿಸಲಾಗುವುದು ಎಂದಿರುವುದರಿಂದ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಈ ವಿಚಾರದಲ್ಲಿ ಆದೇಶ ಬೇಕೆಂದರೆ ಮಾಡಲಾಗುವುದು. ಆದೇಶ ಬೇಡವೆಂದೇ ಮಾಡಿಲ್ಲ. ವ್ಯಕ್ತಿಗತ ಬೈಕ್‌ ಟ್ಯಾಕ್ಸಿ ಚಾಲಕರಿಗೆ ಕಿರುಕುಳ ನೀಡಬೇಡಿ ಎಂದು ಸರ್ಕಾರಕ್ಕೆ ಸೂಚಿಸಿತು.

ಬೈಕ್‌ ಟ್ಯಾಕ್ಸಿ ಚಾಲಕರ ಪರವಾಗಿ ಹಾಜರಾಗಿದ್ದ ವಕೀಲ ಗಿರೀಶ್‌ ಕುಮಾರ್, ಸರ್ಕಾರ ಅಪ್ಲಿಕೇಶನ್‌ ವಿರುದ್ಧ ಕ್ರಮಕೈಗೊಳ್ಳಬಹುದು. ಅಪ್ಲಿಕೇಶನ್‌ ಆಧರಿಸಿ ಸೇವೆ ನೀಡುವ ಟ್ಯಾಕ್ಸಿಗಳ ಮೇಲಲ್ಲ. ವ್ಯಕ್ತಿಗತ ಬೈಕ್‌ಗಳನ್ನು ಜಫ್ತಿ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಡ್ವೊಕೇಟ್‌ ಜನರಲ್‌ ಪ್ರತಿಕ್ರಿಯಿಸಿ, ವ್ಯಕ್ತಿಗತ ಬೈಕ್‌ ಟ್ಯಾಕ್ಸಿ ಸೇವೆ ನೀಡುವವರನ್ನು ಬಂಧಿಸಿಲ್ಲ. ಈ ವಾದ ಸರಿಯಲ್ಲ. ಅವರನ್ನು ನಾವು ಬಂಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ, ಉಬರ್ ಹಾಗೂ ರ‌್ಯಾಪಿಡೋ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ವೇಳೆ, ಬೈಕ್‌ ಟ್ಯಾಕ್ಸಿಗೆ ಸಂಬಂಧಿಸಿದ ತೀರ್ಮಾನವನ್ನು ಸರ್ಕಾರದ ಅತ್ಯುನ್ನತ ಮಟ್ಟದಲ್ಲಿ ನಿರ್ಧರಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು. ಬೈಕ್‌ ಟ್ಯಾಕ್ಸಿ ಸೇವೆಯನ್ನು ಹಲವರು ಜೀವನೋಪಾಯಕ್ಕಾಗಿ ಅವಲಂಬಿಸಿರುವುದರಿಂದ ಈ ವಿಚಾರದ ಬಗ್ಗೆ ಗಂಭೀರವಾಗಿ ಆಲೋಚಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸಲಹೆ ನೀಡಿತ್ತು.

Related Articles

Comments (0)

Leave a Comment