ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಖಾಸಗಿ ದೂರು ರದ್ದು; ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ
- by Jagan Ramesh
- November 22, 2024
- 102 Views
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ್ದ ಖಾಸಗಿ ದೂರು ರದ್ದು ಕೋರಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘಿಸಿದ ಆರೋಪ) ಅಡಿಯಲ್ಲಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಈ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ಜಾಗೃತದಳದ ಅಧಿಕಾರಿ ಹೊಂದಿಲ್ಲ. ಆದ್ದರಿಂದ, ಖಾಸಗಿ ದೂರು ರದ್ದುಪಡಿಸಬೇಕು ಎಂದು ಕೋರಿದರು.
ಈ ವಾದ ಪುರಸ್ಕರಿಸಿದ ನ್ಯಾಯಪೀಠ, ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ದೂರು ರದ್ದುಪಡಿಸಿತು.
ಪ್ರಕರಣವೇನು?
ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ, ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ 2024ರ ಮಾರ್ಚ್ 30ರಂದು ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಲಾಗಿದೆ. ಜತೆಗೆ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂದು ಭಾಷಣದಲ್ಲಿ ಭರವಸೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿ 2024ರ ಏಪ್ರಿಲ್ 4ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ್ದ ವಿಶೇಷ ನ್ಯಾಯಾಲಯ, ಕೋಟ ಶ್ರಿನಿವಾಸ ಪೂಜಾರಿ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
Related Articles
Thank you for your comment. It is awaiting moderation.
Comments (0)