ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಕೋರಿದ್ದ ಪಿಐಎಲ್ ವಜಾ; ಅರ್ಜಿದಾರರಿಗೆ ₹ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್
- by Jagan Ramesh
- October 21, 2024
- 94 Views
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿ, ಕೃತ್ಯದ ವಿಡಿಯೊ ಚಿತ್ರೀಕರಿಸಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಹರಡಿದ ಆರೋಪದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿದೆ.
ಕಳೆದ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಭಾರತೀಯ ಮಹಿಳೆಯರ ಘನತೆಗೆ ಧಕ್ಕೆಯಾಗುವ ರೀತಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸಬೇಕು ಎಂದು ಕೋರಿ ಆಲ್ ಇಂಡಿಯಾ ದಲಿತ ಆಕ್ಷನ್ ಕಮಿಟಿಯು ರಾಷ್ಟ್ರೀಯ ಅಧ್ಯಕ್ಷ ಚಿ. ನಾ. ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು.
ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ, ಪಿಐಎಲ್ ವಜಾಗೊಳಿಸಿತಲ್ಲದೆ, ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿತು. ಜತೆಗೆ, ದಂಡದ ಮೊತ್ತವನ್ನು ಅರ್ಜಿದಾರರು ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಇದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್. ಎಸ್. ರವಿಶಂಕರ್, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ವಿಡಿಯೊ ಮಾಡಿಕೊಂಡಿದ್ದಾರೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಘನತೆಗೆ, ವಿಶೇಷವಾಗಿ ಹಾಸನದ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಆದ್ದರಿಂದ, ಅವರ ವಿರುದ್ಧ ಕ್ರಮಕ್ಕೆ ಆದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ರಾಜ್ಯ ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಬರ್, ಇದೊಂದು ದುರುದ್ದೇಶಪೂರಿತ ಅರ್ಜಿಯಾಗಿದ್ದು, ವಜಾಗೊಳಿಸಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ ಎಂಬ ತೀರ್ಮಾನಕ್ಕೆ ಬಂದು, ಅರ್ಜಿ ವಜಾಗೊಳಿಸಿತಲ್ಲದೆ, ಅರ್ಜಿದಾರರಿಗೆ ದಂಡ ವಿಧಿಸಿತು.
ಸದಸ್ಯತ್ವ ರದ್ದುಗೊಂಡಿತ್ತು:
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಹುಲ್ ಗಾಂಧಿ ಅವರು ಈ ಹಿಂದೆಯೂ ಇಂಥದೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಾರೆ. ಹಿಂದೊಮ್ಮೆ ‘ಮೋದಿ’ ಎಂಬ ಉಪನಾಮ ಹೊಂದಿದವರು ಕಳ್ಳರು ಎಂದಿದ್ದರು. ಇದರಿಂದ, ಅವರ ಲೋಕಸಭೆ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು. ಸದಸ್ಯತ್ವ ರದ್ದತಿ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ರಾಹುಲ್ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಪ್ರಕರಣವೇನು?
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ 2024ರ ಮೇ 2ರಂದು ಶಿವಮೊಗ್ಗದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಆ ಕೃತ್ಯಗಳನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಇಂಥ ಅಭ್ಯರ್ಥಿಯ ಪರವಾಗಿ ಮತ ಕೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಯ ಮೂಲಕ ಮಹಿಳೆಯರ ಘನತೆಗೆ ವಿಶೇಷವಾಗಿ ಹಾಸನ ಭಾಗದ ಮಹಿಳೆಯರ ಘನತೆಗೆ ರಾಹುಲ್ ಹಾನಿಯುಂಟು ಮಾಡಿದ್ದಾರೆ. ಸುಳ್ಳು ಸುದ್ದಿ ಹರಡುವ ಮೂಲಕ ಪ್ರಕರಣವನ್ನು ಮತಗಳಿಕೆಗೆ ಬಳಸಿಕೊಂಡಿದ್ದಾರೆ. ಭಾರತದ ಮಹಿಳೆಯ ಘನತೆಗೆ ಹಾನಿ ಮಾಡಿರುವ ಅವರ ವಿರುದ್ಧ ಅಧಿಕಾರಿಗಳೂ ಕ್ರಮಕೈಗೊಂಡಿಲ್ಲ. ಆದ್ದರಿಂದ, ಅವರ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು ಎಂದು ಪಿಐಎಲ್ನಲ್ಲಿ ಮನವಿ ಮಾಡಲಾಗಿತ್ತು.
Related Articles
Thank you for your comment. It is awaiting moderation.
Comments (0)