ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ದೋಷಾರೋಪ ನಿಗದಿಗೆ ಹೈಕೋರ್ಟ್ ತಡೆ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ
- by Jagan Ramesh
- August 30, 2024
- 101 Views

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ವಿಚಾರಣಾ ನ್ಯಾಯಾಲಯ ದೋಷಾರೋಪ ನಿಗದಿಪಡಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಆರೋಪಿಸಿರುವ ಅಪರಾಧ ಕೃತ್ಯಗಳು ಬಹಳ ವರ್ಷಗಳ ಹಿಂದೆ ನಡೆದಿದೆ. ದ್ವೇಷ ಭಾವನೆಯಿಂದ ಅರ್ಜಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ವಿಚಾರಣಾ ನ್ಯಾಯಾಲಯ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸುವ ಪ್ರಕ್ರಿಯೆಯನ್ನು ಆಗಸ್ಟ್ 30ಕ್ಕೆ (ಶುಕ್ರವಾರ) ನಿಗದಿಪಡಿಸಿದ್ದು, ಆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಮನವಿ ಪರಿಗಣಿಸಿದ ಪೀಠ, ದೋಷಾರೋಪ ನಿಗದಿ ಪ್ರಕ್ರಿಯೆಗೆ ತಡೆ ನೀಡಿತಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಹುಲಿಯೂರು ದುರ್ಗ ಠಾಣೆ ಪೊಲೀಸರು ಮತ್ತು ದೂರುದಾರೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅರ್ಜಿದಾರ ಸ್ವಾಮೀಜಿಯ ವಿರುದ್ಧ 2024ರ ಮಾ.7ರಂದು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದೂರು ದಾಖಲಾಗಿದೆ.
Related Articles
Thank you for your comment. It is awaiting moderation.
Comments (0)