ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್; ನಿಂಗಪ್ಪ ಸಾವಂತ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
- by Ramya B T
- June 18, 2025
- 281 Views

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನೂರಾರು ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಮುಖ್ಯಪೇದೆ ನಿಂಗಪ್ಪ ಸಾವಂತ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್ (45) ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ಪೀಠ, ಪ್ರತಿವಾದಿಗಳಾಗಿರುವ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು. ಜತೆಗೆ, ಅರ್ಜಿದಾರರ ವಿರುದ್ಧದ ತನಿಖೆ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.
ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳ ಕುರಿತು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡುವ ಜತೆಗೆ, ದಾಳಿಗಳ ಬಗ್ಗೆ ಮುಂಚಿತವಾಗಿ ಮಾಹಿತಿ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ನಿಂಗಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ (ಪಿಸಿ) ಕಾಯ್ದೆ-1988ರ ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಇದರಿಂದ, ಪ್ರಕರಣ ರದ್ದು ಕೋರಿ ನಿಂಗಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪತ್ನಿಯಿಂದಲೂ ಅರ್ಜಿ:
ಮತ್ತೊಂದೆಡೆ, ನಿಂಗಪ್ಪ ಬಂಧನ ಪ್ರಶ್ನಿಸಿ ಆತನ ಪತ್ನಿ ಚಂದ್ರಕಲಾ ಹೈಕೋರ್ಟ್ಗೆ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಪೊಲೀಸರು ಪತಿಯನ್ನು 2025ರ ಮೇ 31ರಂದು ಹೊಸದುರ್ಗದಲ್ಲಿ ಬಂಧಿಸಿದ್ದಾರೆ. ಆದರೆ, 2025ರ ಜೂನ್ 2ರಂದು ಬೆಂಗಳೂರಿನ ರಾಜಾಜಿನಗರದ ಮಾರುತಿ ಮೈದಾನದಲ್ಲಿ ಬಂಧಿಸಲಾಗಿದೆ ಎಂದು ದಾಖಲೆಗಳಲ್ಲಿ ತೋರಿಸಲಾಗಿದೆ. ಪೊಲೀಸರು ಬಂಧನಕ್ಕೂ ಮುನ್ನ ಆರೋಪಿಗೆ ನೀಡಬೇಕಾದ ಸೂಕ್ತ ಕಾರಣ/ಆಧಾರಗಳನ್ನು ಒದಗಿಸಿಲ್ಲ. ಆದ್ದರಿಂದ, ಈ ಬಂಧನ ಅಕ್ರಮವೆಂದು ಘೋಷಿಸಿ, ಪತಿಯನ್ನು ಕೂಡಲೇ ಬಿಡುಗಡೆಗೊಳಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
Related Articles
Thank you for your comment. It is awaiting moderation.
Comments (0)