ಹೈಕೋರ್ಟ್‌ನಲ್ಲಿ ನಾಳೆ ಮುಡಾ ಹಗರಣದ ವಿಚಾರಣೆ; ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿರುವ ಅರ್ಜಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯು ಗುರುವಾರ ಮತ್ತೆ ಹೈಕೋರ್ಟ್‌ ಮುಂದೆ ವಿಚಾರಣೆಗೆ ಬರಲಿದೆ.

ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿ ಆಧರಿಸಿ ಆ.29ರ ವರೆಗೆ ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿ ಆಗಸ್ಟ್ 19ರಂದು ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಿಂದ ಸಿದ್ದರಾಮಯ್ಯ 10 ದಿನಗಳ ಕಾಲ ನಿರಾಳರಾಗಿದ್ದರು. ಇದೀಗ, ಅರ್ಜಿ ಮತ್ತೆ ವಿಚಾರಣೆಗೆ ಬರಲಿದ್ದು, ರಾಜಕೀಯ ಪಕ್ಷಗಳು, ಸಾರ್ವಜನಿಕರು ಸೇರಿ ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯು ಗುರುವಾರ ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದು, ನ್ಯಾಯಪೀಠದ ಹಿಂದಿನ ಸೂಚನೆಯಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರ, ರಾಜ್ಯಪಾಲರ ಕಚೇರಿಯ ವಿಶೇಷ ಕಾರ್ಯದರ್ಶಿ, ಖಾಸಗಿ ದೂರುದಾರರಾದ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್‌.ಪಿ. ಪ್ರದೀಪ್‌ ಕುಮಾರ್‌ ಪರ ವಕೀಲರು ತಮ್ಮ ವಾದ ಹಾಗೂ ಪ್ರತಿವಾದ ಮಂಡಿಸಬೇಕಿದೆ.

ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದ ಸಿಎಂ:
ಸಿದ್ದರಾಮಯ್ಯ ಅವರ ಅರ್ಜಿಯನ್ನು ಆಗಸ್ಟ್ 19ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಆಧರಿಸಿ ಆ.29ರ ವರೆಗೆ ಮುಖ್ಯಮಂತ್ರಿಗಳ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿ ಮಧ್ಯಂತರ ಆದೇಶ ಹೊರಡಿಸಿತ್ತು.

ಇದರಿಂದ, ವಿಶೇಷ ತನಿಖಾ ದಳ ಅಥವಾ ಬೇರೆ ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ಮುಡಾ ಹಗರಣದ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಗಸ್ಟ್ 20ರಂದು ಪ್ರಕಟಿಸಬೇಕಿದ್ದ ತೀರ್ಪು ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿತ್ತು.

ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ, ಟಿ.ಜೆ.ಅಬ್ರಹಾಂ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಜರುಗಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೂ ಅವಕಾಶ ಇಲ್ಲದಂತಾಗಿತ್ತು. ಈ ಮೂಲಕ ಸಿಎಂ ಸಿದ್ದರಾಮಯ್ಯ 10 ದಿನಗಳ ಕಾಲ ನಿರಾಳರಾಗಿದ್ದರು. ಇದೀಗ, ಗುರುವಾರ ನ್ಯಾಯಾಲಯದಿಂದ ಯಾವ ರೀತಿಯ ಆದೇಶ ಹೊರ ಬೀಳಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

Related Articles

Comments (0)

Leave a Comment