ಸರ್ಕಾರಿ ಭೂಮಿ ಒತ್ತುವರಿ ಆರೋಪ; ಜ.21ರವರೆಗೆ ರವಿಶಂಕರ್ ಗುರೂಜಿ ವಿರುದ್ಧ ಕ್ರಮ ಕೈಗೊಳ್ಳದಂತೆ ಬಿಎಂಟಿಎಫ್ಗೆ ಹೈಕೋರ್ಟ್ ಸೂಚನೆ
- by Jagan Ramesh
- January 13, 2026
- 8 Views
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು, ಕೆರೆ ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ವಿರುದ್ಧ ಜನವರಿ 21ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ಗೆ (ಬಿಎಂಟಿಎಫ್) ಹೈಕೋರ್ಟ್ ಸೂಚಿಸಿದೆ.
ಒತ್ತುವರಿ ಆರೋಪ ಸಂಬಂಧ ಬಿಎಂಟಿಎಫ್ ದಾಖಲಿಸಿರುವ ಪ್ರಕರಣ ರದ್ದು ಕೋರಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನಕುಮಾರ್ ವಾದ ಮಂಡಿಸಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ವಿಭಾಗೀಯ ನ್ಯಾಯಪೀಠ ನೀಡಿದ ಆದೇಶದ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒತ್ತುವರಿಗೂ, ಅರ್ಜಿದಾರರಿಗೂ ಯಾವ ಸಂಬಂಧವೂ ಇಲ್ಲ. ಆಧಾರರಹಿತ ಎಫ್ಐಆರ್ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆಗ ಸರ್ಕಾರದ ಪರ ವಕೀಲರು, ಅರ್ಜಿದಾರರಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕರು ಎಂದು ತಿಳಿಸಿದರು.
ಆಗ ನ್ಯಾಯಪೀಠ, ಹಾಗಿದ್ದರೆ ಅರ್ಜಿದಾರರ ವಿರುದ್ಧ ದಾಖಲೆಗಳಿದ್ದರೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತಲ್ಲದೆ, ಅಲ್ಲಿವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಬಿಎಂಟಿಎಫ್ಗೆ ಸೂಚಿಸಿತು.
Related Articles
Thank you for your comment. It is awaiting moderation.


Comments (0)