ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣದ ಅರ್ಜಿ ಇತ್ಯರ್ಥ; ರಾಜ್ಯಾದ್ಯಂತ ಏಕರೂಪದ ಪರೀಕ್ಷಾ ವ್ಯವಸ್ಥೆಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮವನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್, ರಾಜ್ಯಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಏಕರೂಪವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಭರತ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂಬ ಕೆಇಎ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡು ಅರ್ಜಿ ಇತ್ಯರ್ಥಪಡಿಸಿತು.

ರಾಜ್ಯಾದ್ಯಂತ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಬೇಕಾದ ವ್ಯವಸ್ಥೆಗಳು ಏಕರೂಪವಾಗಿ ಇರುವಂತೆ ನೋಡಿಕೊಳ್ಳಲು ಕೆಇಎ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಂಡು ಸೂಚನೆಗಳನ್ನು ನೀಡಲಾಗುವುದು ಎಂಬ ಪ್ರಾಧಿಕಾರದ ಪರ ವಕೀಲರ ಹೇಳಿಕೆಯ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಮತ್ತಷ್ಟು ವಿಚಾರಣೆಗೆ ವಿಷಯ ಉಳಿದಿಲ್ಲ ಎಂದು ತಿಳಿಸಿತು.

ಅಂತಿಮವಾಗಿ ಕೆಇಎ ಹೇಳಿಕೆ ದಾಖಲಿಸಿಕೊಂಡು ಅರ್ಜಿ ಇತ್ಯರ್ಥಪಡಿಸಿದ ನ್ಯಾಯಾಲಯ, ರಾಜ್ಯದಾದ್ಯಂತ ಪರೀಕ್ಷೆಗಳನ್ನು ಸುವ್ಯವಸ್ಥಿತ ಮತ್ತು ಏಕರೂಪದ ರೀತಿಯಲ್ಲಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಉಪ ಅಧೀಕ್ಷಕರಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಆದೇಶಿಸಿತು.

ಪ್ರಕರಣವೇನು?
2025ರ ಏಪ್ರಿಲ್‌ 17ರಿಂದ 19ರವರೆಗೆ ನಡೆದ ಸಿಇಟಿಯಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕ್ರಮವನ್ನು ಅಸಾಂವಿಧಾನಿಕ, ಸ್ವೇಚ್ಛಾಚಾರದ ಹಾಗೂ ಕಾನೂನುಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಕೋರಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಪರೀಕ್ಷೆಗಳ ನಿರ್ವಹಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿನ ದೈಹಿಕ ತಪಾಸಣೆಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಜತೆಗೆ, ಇಂತಹ ಕ್ರಮಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಬೇಕು, ಜನಿವಾರ ಧರಿಸುವ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯ ಮಾಡದಂತೆ ಹಾಗೂ ಅವರ ಅತ್ಯಾವಶ್ಯಕ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸದಂತೆ ನಿರ್ದೇಶಿಸಬೇಕು ಎಂದು ಮಹಾಸಭಾ ಅರ್ಜಿಯಲ್ಲಿ ಮನವಿ ಮಾಡಿತ್ತು.

ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ್ದ ಮಹಾಸಭಾ ಪರ ವಕೀಲರು, ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿ ಪರೀಕ್ಷೆಗೆ ಹಾಜರಾಗಲು ಆಯ್ದ ರೀತಿಯಲ್ಲಿ ಅವಕಾಶ ನಿರಾಕರಿಸಿರುವುದು ತಾರತಮ್ಯದಿಂದ ಕೂಡಿದೆ. ಈ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರವೂ ಅಂತಹ ಘಟನೆಗಳು ನಡೆದಿವೆ. ಆದ್ದರಿಂದ, ಪರೀಕ್ಷೆಗಳ ನಿರ್ವಹಣೆ ಹಾಗೂ ವಿಶೇಷವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ನಡೆಸುವ ದೈಹಿಕ ತಪಾಸಣೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು.

ಕೆಇಎ ಪರ ವಕೀಲರು ವಾದ ಮಂಡಿಸಿ, ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳು ಧರಿಸಿರುವ ಜನಿವಾರವನ್ನು ತೆಗೆಯುವಂತೆ ಯಾವುದೇ ಸೂಚನೆ ಅಥವಾ ಮಾರ್ಗಸೂಚಿ ನೀಡಿಲ್ಲ. ಅಂತಹ ಘಟನೆಗಳು ವರದಿಯಾದ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅವು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಹಾಗೂ ಪರೀಕ್ಷಾ ನಿರ್ವಹಣೆಯಲ್ಲಿ ತೊಡಗಿರುವ ಎಲ್ಲರಿಗೂ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದ್ದರಲ್ಲದೆ, ವಿದ್ಯಾರ್ಥಿಗಳು ಪಾಲಿಸಬೇಕಾದ ಉಡುಪು ನಿಯಮಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

Related Articles

Comments (0)

Leave a Comment