ಚಾಮುಂಡಿ ಬೆಟ್ಟದ ಆವರಣದಲ್ಲಿ ನಿರ್ಮಾಣ ಕಾರ್ಯವನ್ನು ತಕ್ಷಣದಿಂದಲೇ ನಿಲ್ಲಿಸಲು ಜಿಲ್ಲಾಧಿಕಾರಿಗೆ ಹೈಕೋರ್ಟ್ ತಾಕೀತು
- by LegalSamachar
- April 9, 2026
- 5 Views
ಬೆಂಗಳೂರು: ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯದ ಆವರಣದಲ್ಲಿ ಕಾಮಗಾರಿ ಮುಂದುವರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಿವಾದಿತ ಸ್ಥಳದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ನಿರ್ಮಾಣ ಚಟುವಟಿಕೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕದಸದ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.
ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ನಿರ್ಮಾಣ ಕಾಮಗಾರಿಗಳನ್ನು ತಕ್ಷಣವೇ ನಿಲ್ಲಿಸಬೇಕು. ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 47 ಕೋಟಿ ರೂ. ಗಳನ್ನು ಯಾವ ಕೆಲಸಗಳಿಗೆ ಬಳಸಲಾಗಿದೆ, ಎಷ್ಟು ಹಣ ವೆಚ್ಚ ಮಾಡಲಾಗಿದೆ ಎಂಬ ಬಗ್ಗೆ 2 ವಾರಗಳಲ್ಲಿ ವಿವರವಾದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗೆ ತಾಕೀತು ಮಾಡಿರುವ ನ್ಯಾಯಪೀಠ, ಭವಿಷ್ಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಲ್ಲಿ ಅದನ್ನು “ಗಂಭೀರ ನ್ಯಾಯಾಂಗ ನಿಂದನೆ” ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಹಣ ಮಂಜೂರಾತಿ ಕೋರ್ಟ್ ಆದೇಶ ಉಲ್ಲಂಘನೆಗೆ ಪರವಾನಗಿಯಲ್ಲ:
ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಯಾವುದೇ ಶಾಶ್ವತ ಕಾಮಗಾರಿ ನಡೆಸುವುದಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ, ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಫೋಟೋಗಳನ್ನು ಗಮನಿಸಿದರೆ ದೇವಾಲಯದ ಆವರಣದಲ್ಲಿ ಬೃಹತ್ ಮಟ್ಟದ ಶಾಶ್ವತ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದನ್ನು ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಕೇಂದ್ರ ಸರ್ಕಾರದಿಂದ 47 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂಬ ಕಾರಣ ನೀಡಿ ನಿರ್ಮಾಣ ಕಾರ್ಯವನ್ನು ಸಮರ್ಥಿಸಿಕೊಂಡಿರುವ ಜಿಲ್ಲಾಧಿಕಾರಿಗಳ ನಡೆಯು ದುರುದ್ದೇಶಪೂರಿತ ಮಾತ್ರವಲ್ಲ, ಕಾನೂನಿನಲ್ಲಿ ಸಂಪೂರ್ಣವಾಗಿ ಅಸಮರ್ಥನೀಯವೂ ಆಗಿದೆ. ಜಿಲ್ಲಾಧಿಕಾರಿಗಳು ರಾಜ್ಯದ ಅಧಿಕಾರಿಯಾಗಿದ್ದು, ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವರ ಆದ್ಯ ಕರ್ತವ್ಯವಾಗಿರುತ್ತದೆ. ಆದೇಶ ಪಾಲಿಸದಿರುವುದನ್ನು ಸಮರ್ಥಿಸುವ ಯಾವುದೇ ಪ್ರಯತ್ನವು ನ್ಯಾಯಾಂಗ ಅಧಿಕಾರದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿರುವ ನ್ಯಾಯಪೀಠ, ಹಣಕಾಸಿನ ಮಂಜೂರಾತಿಯು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಲು ಪರವಾನಗಿ ನೀಡುವುದಿಲ್ಲ ಎಂದು ತೀಕ್ಷ್ಣವಾಗಿ ನುಡಿದಿದೆ.
Related Articles
Thank you for your comment. It is awaiting moderation.



Comments (0)