ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ; ತಿಮರೋಡಿ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ
- by Jagan Ramesh
- October 24, 2025
- 50 Views
ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ತಮ್ಮ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ಈ ಮಧ್ಯಂತರ ಆದೇಶ ಮಾಡಿದೆ.
ಜತೆಗೆ, ಅರ್ಜಿ ಸಂಬಂಧ ಬೆಳ್ತಂಗಡಿ ಠಾಣೆ ಪೊಲೀಸರು ಹಾಗೂ ಪ್ರಕರಣದ ದೂರುದಾರಾಗಿರುವ ಎಸ್‌ಐಟಿ ಪೊಲೀಸ್ ಅಧಿಕಾರಿ ಸಿ.ಎ. ಸೈಮನ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ ಮೂರನೇ ವಾರಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ 2025ರ ಆಗಸ್ಟ್ 26ರಂದು ಶೋಧ ನಡೆಸಿದ್ದ ಎಸ್‌ಐಟಿ ಪೊಲೀಸರು, ಸೆಪ್ಟೆಂಬರ್ 16ರಂದು ದೂರು ನೀಡಿದ್ದಾರೆ. ಅರ್ಜಿದಾರರ ಮನೆಯಲ್ಲಿ ಪರವಾನಗಿ ಇಲ್ಲದ ಏರ್ ಗನ್ ಅನ್ನು ವಶಪಡಿಸಿಕೊಂಡಿದ್ದರೆ, ಶಸ್ತ್ರಾಸ್ತ್ರ ಕಾಯ್ದೆ-1959ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಅರ್ಜಿದಾರರಿಗೆ ಕಿರುಕುಳ ನೀಡುವ ಏಕೈಕ ಉದ್ದೇಶದಿಂದ ಈ ದೂರು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಪ್ರಕರಣವೇನು?
ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, 2025ರ ಆಗಸ್ಟ್ 26ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದ ವೇಳೆ ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ತನಿಖಾ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ನಂತರ ಎಸ್‌ಐಟಿ ಅಧಿಕಾರಿ ಸೈಮನ್ ಅವರು ಸೆಪ್ಟೆಂಬರ್ 16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕು ಎಂದು ಕೋರಿದ್ದರು. ಈ ದೂರಿನ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ, ಎಫ್ಐಆರ್ ರದ್ದು ಕೋರಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.


Comments (0)