ಗಾಳಿ ಆಂಜನೇಯ ಸ್ವಾಮಿ ದೇವಾಲಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಟ್ರಸ್ಟಿಗಳಿಗೆ ಹೈಕೋರ್ಟ್ ಅನುಮತಿ
- by Jagan Ramesh
- March 18, 2026
- 10 Views
ಬೆಂಗಳೂರು: ನಗರದ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ವತಿಯಿಂದ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದೇವಸ್ಥಾನದ ಟ್ರಿಸ್ಟಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಿ 2025ರ ಜುಲೈ 8ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್ನ ಸಂಚಾಲಕರಾದ ಬಿ.ಪಿ. ನಾಗರಾಜು ಹಾಗೂ ಇತರ ಟ್ರಸ್ಟಿಗಳು ಹೈಕೊರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಭಾಗವಾಗಿ ಮಧ್ಯಂತರ ಅರ್ಜಿ ಸಲ್ಲಿಸಿದ ಟ್ರಸ್ಟಿಗಳು, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ತಮಗೆ ಅನುಮತಿ ನೀಡಬೇಕು. ಈ ವೇಳೆ ತಾವು ಯಾವುದೇ ಹಣಕಾಸು ವಹಿವಾಟು ನಿರ್ವಹಣೆ ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಬುಧವಾರ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರಾದ ದೇವಸ್ಥಾನದ ಟ್ರಸ್ಟಿಗಳು ಮಾರ್ಚ್ 23 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬಹುದು. ಆದರೆ, ಅರ್ಜಿದಾರರು ಜಾತ್ರೆಯ ಹಣಕಾಸು ವಹಿವಾಟು ನಿರ್ವಹಣೆ ಮಾಡುವಂತಿಲ್ಲ. ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಣಕಾಸು ನಿರ್ವಹಣೆಯ ಮಾಡಬೇಕು. ಜಾತ್ರೆ ಪೂರ್ಣಗೊಂಡ 15 ದಿನಗಳಲ್ಲಿ ಆಯುಕ್ತರು ಲೆಕ್ಕಪತ್ರವನ್ನು ಕೋರ್ಟ್ಗೆ ಸಲ್ಲಿಸಬೇಕು. ಟ್ರಸ್ಟ್ ಕಸ್ಟಡಿಯಲ್ಲಿರುವ ಉತ್ಸವ ಮೂರ್ತಿಯ ಆಭರಣಗಳನ್ನು ಆಯುಕ್ತರ ಸುಪರ್ದಿಗೆ ಒಪ್ಪಿಸಬೇಕು ಎಂದು ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.
ಪ್ರಕರಣದ ಹಿನ್ನೆಲೆ:
ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ. ದೇವಾಲಯಕ್ಕೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಪ್ರತಿ ವರ್ಷ ಉಳಿತಾಯವಿಲ್ಲದೆ ವೆಚ್ಚ ಮಾಡಲಾಗುತ್ತಿದೆ. ದೇವಸ್ಥಾನದ ಹಣ ದುರುಪಯೋಗವಾಗುತ್ತಿದೆ. ಆದಾಯ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆ ನಿರ್ವಹಣೆ ಮಾಡಿಲ್ಲ. ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ನೋಟಿಸ್ ನೀಡಿದ ಬಳಿಕ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದ ಮುಜರಾಯಿ ಇಲಾಖೆ ದೇವಾಲಯವನ್ನು ಸುಪರ್ದಿಗೆ ಪಡೆದು 2025ರ ಜುಲೈ 8ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪಶ್ನಿಸಿ ಅರ್ಜಿದಾರರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು 2025ರ ಜುಲೈ 16ರಂದು ನಿರಾಕರಿಸಿತ್ತು.
Related Articles
Thank you for your comment. It is awaiting moderation.


Comments (0)