ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಅಜಯ್ ಧರಂ ಸಿಂಗ್ ನೇಮಕ ಪ್ರಶ್ನಿಸಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ಶಾಸಕ ಡಾ. ಅಜಯ್ ಧರಂ ಸಿಂಗ್ ಅವರನ್ನು ಕಾನೂನುಬಾಹಿರವಾಗಿ ನೇಮಕ ಮಾಡಲಾಗಿದ್ದು, ಅವರ ನೇಮಕಾತಿ ರದ್ದುಪಡಿಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕಲಬುರಗಿಯ ಅಹಿಂದ ಚಿಂತಕರ ವೇದಿಕೆ-ಕಲ್ಯಾಣ ಕರ್ನಾಟಕ 371(ಜೆ) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿಯ ಅಧ್ಯಕ್ಷ ಸಾಯಿಬಣ್ಣ ಜಮಾದಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲ ಶಂಕರಪ್ಪ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೆಕೆಆರ್‌ಡಿಬಿ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ ಏನು?
ಕೆಕೆಆರ್‌ಡಿಬಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಅಧ್ಯಕ್ಷರನ್ನಾಗಿ ಹಾಗೂ ಸರ್ಕಾರದ ರಾಜ್ಯ ಕಾರ್ಯದರ್ಶಿ ದರ್ಜೆಯ ಅಧಿಕಾರಿಯನ್ನು ಮಂಡಳಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಬೇಕು ಎಂದು ರಾಜ್ಯಪಾಲರ ಆದೇಶದಂತೆ 2013ರ ಜೂನ್ 11ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದನ್ನು ಮೀರಿ ಶಾಸಕರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದ್ದು, ಕೊಪ್ಪಳ ಜಿಲ್ಲಾಧಿಕಾರಿ ನಳಿನಿ ಅತುಲ್ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದು ಸಂವಿಧಾನದ ಕಲಂ 371 (ಜೆ) ತಿದ್ದುಪಡಿ ಹಾಗೂ ರಾಜ್ಯಪಾಲರ ಆದೇಶಕ್ಕೆ ವಿರುದ್ಧವಾಗಿದೆ. ಆದ್ದರಿಂದ, ಶಾಸಕರ ನೇಮಕಾತಿ ರದ್ದುಪಡಿಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಸರ್ಕಾರದ ರಾಜ್ಯ ಸರ್ಕಾರಿ ದರ್ಜೆಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Related Articles

Comments (0)

Leave a Comment