ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ರಿಟ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸೌಹಾರ್ದ ಸಹಕಾರಿ ಬ್ಯಾಂಕ್‌ಗಳು ತಮ್ಮ ಠೇವಣಿಯ ಶೇ. 20 ಪ್ರಮಾಣದ ಮೊತ್ತವನ್ನು ಪ್ರತಿ 3 ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್‌ಗಳಲ್ಲಿ ಇರಿಸುವುದು, ಬ್ಯಾಂಕ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್ಷ ತಮ್ಮ ಆಸ್ತಿ ಘೋಷಿಸುವುದು ಸೇರಿ ಹಲವು ಷರತ್ತುಗಳನ್ನು ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಕಾಯ್ದೆ-2025ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ. ನಂಜನಗೌಡ ಹಾಗೂ ನಿಯಮಿತದ ಸದಸ್ಯ ಸಂಸ್ಥೆಗಳಾಗಿರುವ ರಾಜ್ಯದ ವಿವಿಧ 12 ಸೌಹಾರ್ದ ಸಹಕಾರಿ ಸಂಘಗಳ ಸಿಇಒಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾ‍ಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ, ಸಹಕಾರ ಇಲಾಖೆ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿ, ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಒಂದೊಮ್ಮೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸದಿದ್ದರೆ ಕಾಯ್ದೆ ಜಾರಿಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಲಾಗುವುದು ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.

ಮನವಿ ಏನು?
ತಿದ್ದುಪಡಿ ಕಾಯ್ದೆಯು ಸಹಕಾರ ತತ್ವಕ್ಕೆ ವಿರುದ್ಧವಾಗಿದ್ದು, ಸಹಕಾರ ಸಂಘಗಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಅಲ್ಲದೆ, ತಿದ್ದುಪಡಿಯು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವತಂತ್ರ ನಿರ್ವಹಣೆಗೆ ಅಡ್ಡಿ ಉಂಟು ಮಾಡಲಿದೆ. ಆದ್ದರಿಂದ, ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದ್ದು, ಅರ್ಜಿ ಇತ್ಯರ್ಥವಾಗುವವರೆಗೆ 2025ರ ಸೆಪ್ಟೆಂಬರ್ 12ರಂದು ಜಾರಿಗೆ ಬಂದಿರುವ ಕಾಯ್ದೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

Related Articles

Comments (0)

Leave a Comment