ರಂಗ ಶಿಕ್ಷಕರ ನೇಮಕಾತಿಗೆ ಮೀಸಲಾತಿ ನಿಗದಿಗೆ ನಿರ್ದೇಶನ ಕೋರಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- by LegalSamachar
- November 11, 2026
- 9 Views
ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ‘ರಂಗ ಶಿಕ್ಷಕ’ (ಡ್ರಾಮಾ ಟೀಚರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ಅಂತಿಮಗೊಳಿಸಿ ಸೂಕ್ತ ಮೀಸಲಾತಿ ನಿಗದಿಪಡಿಸಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ರೌಡಕುಂದಾ ಗ್ರಾಮದ ನಿವಾಸಿ ಮಹೇಶ ಸೇರಿ ಮ್ಯಾನತೆ ಪಡೆದ ಸಂಸ್ಥೆಗಳಲ್ಲಿ ರಂಗ ಭೂಮಿ ಮತ್ತು ನಾಟಕ ಕಲೆಗಳ ಶಿಕ್ಷಣ ಪಡೆದ ರಂಗ ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆದಿರುವ ರಾಜ್ಯದ ಕೆಲ ನಿರುದ್ಯೋಗಿ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ ಏನು?
ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 2026 ಜುಲೈ 17ರಂದು ಹೊರಡಿಸಲಾಗಿರುವ ಕರಡು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸಬೇಕು. ಮುಂದಿನ ಶಿಕ್ಷಕರ ನೇಮಕಾತಿಗಳಲ್ಲಿ ರಂಗ ಶಿಕ್ಷಕರ ಹುದ್ದೆಗಳಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
Related Articles
Thank you for your comment. It is awaiting moderation.


Comments (0)