ಸರ್ಕಾರಿ ಭೂಮಿ ಒತ್ತುವರಿ ಆರೋಪ; ಶ್ರೀ‌ ಶ್ರೀ ರವಿಶಂಕರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಶ್ರೀ ಶ್ರೀ ರವಿಶಂಕರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಮಾರ್ಚ್ 4ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು‌.

ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠ, ಶ್ರೀ ಶ್ರೀ ರವಿಶಂಕರ್‌ ವಿರುದ್ದದ ಪ್ರಕರಣವನ್ನು ರದ್ದುಪಡಿಸಿದೆ. ಆದೇಶದಲ್ಲಿ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 528ರ ಅಡಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಎಸ್. ಶ್ರೀರಂಗ ಹಾಗೂ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಒತ್ತುವರಿಗೆ ಸಂಬಂಧಿಸಿದ ವರದಿಯಲ್ಲಿ ಎಲ್ಲಿಯೂ ಸಹ ಶ್ರೀ ಶ್ರೀ ರವಿಶಂಕರ್‌ ಯಾವುದೇ ಆಸ್ತಿ ಹೊಂದಿರುವುದು ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರಿವುದನ್ನು ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ಶ್ರೀ ಶ್ರೀ ರವಿಶಂಕರ್‌ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.

ಸರ್ಕಾರದ ಪರ ವಾದ ಮಂಡಿಸಿದ್ದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎ. ಬೆಳ್ಳಿಯಪ್ಪ ಅವರು, ಅರ್ಜಿದಾರರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಗಳಿದ್ದು, ಈ ಹಂತದಲ್ಲಿ ತನಿಖೆಯನ್ನು ತಡೆಯಬಾರದು. ತನಿಖೆ ಮುಂದುವರಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು.

Related Articles

Comments (0)

Leave a Comment