ಸರ್ಕಾರಿ ಭೂಮಿ ಒತ್ತುವರಿ ಆರೋಪ; ಶ್ರೀ‌ ಶ್ರೀ ರವಿಶಂಕರ್ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ಶ್ರೀ ಶ್ರೀ ರವಿಶಂಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಮಾರ್ಚ್ 3) ವಿಚಾರಣೆ ನಡೆಸಿತು.

ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು. ಇದೇ ವೇಳೆ, ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿ ಜನವರಿ 13ರಂದು ಹೊರಡಿಸಿರುವ ಮಧ್ಯಂತರ ಆದೇಶವು ಅರ್ಜಿ ಇತ್ಯರ್ಥವಾಗುವವರೆಗೆ ಮುಂದುವರಿಯಲಿದೆ ಎಂದು ನ್ಯಾಯಪೀಠ ಮೌಖಿಕವಾಗಿ ತಿಳಿಸಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ಹಿರಿಯ ವಕೀಲ ಎಸ್. ಶ್ರೀರಂಗ ಹಾಗೂ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಒತ್ತುವರಿಗೆ ಸಂಬಂಧಿಸಿದ ವರದಿಯಲ್ಲಿ ಎಲ್ಲಿಯೂ ಸಹ ಅರ್ಜಿದಾರರು ಯಾವುದೇ ಆಸ್ತಿಯನ್ನು ಹೊಂದಿರುವುದು ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರಿವುದನ್ನು ತೋರಿಸುವುದಿಲ್ಲ. ಜತೆಗೆ, ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ಅರ್ಜಿದಾರರ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎ. ಬೆಳ್ಳಿಯಪ್ಪ, ಅರ್ಜಿದಾರರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಗಳಿದ್ದು, ಈ ಹಂತದಲ್ಲಿ ತನಿಖೆಯನ್ನು ತಡೆಯಬಾರದು. ತನಿಖೆ ಮುಂದುವರಿಸಲು ಅನುಮತಿ ನೀಡಬೇಕು ಎಂದು ಕೋರಿದರು.

Related Articles

Comments (0)

Leave a Comment