ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ನಿರ್ಬಂಧ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
- by Jagan Ramesh
- October 28, 2025
- 43 Views
ಬೆಂಗಳೂರು/ಧಾರವಾಡ: ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಸೇರಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಟ್ರಸ್ಟ್, ವಿ ಕೇರ್ ಫೌಂಡೇಷನ್ ಸೇರಿ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ಅರ್ಜಿ ಕುರಿತು ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಧಾರವಾಡ ನಗರ ಪೊಲೀಸ್ ಆಯುಕ್ತರು, ಧಾರವಾಡ ಉಪ ಪೊಲೀಸ್ ಆಯುಕ್ತರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು.
ಹೈಕೋರ್ಟ್ ಆದೇಶವೇನು?
ಸಾರ್ವಜನಿಕ ಸ್ಥಳಗಳಲ್ಲಿ ಹತ್ತಕ್ಕೂ ಅಧಿಕ ಮಂದಿ ಗುಂಪು ಸೇರುವುದನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿರುವ ಆದೇಶವು ಮೇಲ್ನೋಟಕ್ಕೆ ಸಂವಿಧಾನದ ಪರಿಚ್ಛೇದ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಹಾಗೂ 19(1)(ಬಿ) (ಶಸ್ತ್ರಾಸ್ತ್ರರಹಿತವಾಗಿ, ಶಾಂತಿಯುತವಾಗಿ ಒಟ್ಟುಗೂಡುವ) ಅಡಿಯಲ್ಲಿ ಸಾರ್ವಜನಿಕರಿಗೆ ದೊರೆತಿರುವ ಹಕ್ಕುಗಳನ್ನು ಕಸಿದುಕೊಳ್ಳುವಂತಿವೆ. ಸಂವಿಧಾನ ಪ್ರದತ್ತ ಹಕ್ಕನ್ನು ಕಾನೂನು ಜಾರಿಗೊಳಿಸುವ ಮೂಲಕ ಕಸಿದುಕೊಳ್ಳಬಹುದೇ ಹೊರತು ಸರ್ಕಾರಿ ಆದೇಶ ಹೊರಡಿಸುವ ಮೂಲಕವಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಒಂದೊಮ್ಮೆ, ಸರ್ಕಾರದ ಆದೇಶವನ್ನು ಹೀಗೇ ಬಿಟ್ಟರೆ, ಸಾರ್ವಜನಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶವನ್ನು ಕಾರ್ಯಗತಗೊಳಿಸಲು ಅನುಮತಿಸಲು ಸಾಧ್ಯವಿಲ್ಲ. ಅದಾಗ್ಯೂ, ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಈ ಸಂಬಂಧ ಸೂಕ್ತ ಮಾಹಿತಿ ಪಡೆದು ತಿಳಿಸಲು ಕಾಲಾವಕಾಶ ಕೋರಿದ್ದಾರೆ. ಸರ್ಕಾರದ ಆದೇಶವು ಸಂವಿಧಾನದ ಪರಿಚ್ಛೇದ 13(2) (ಸಂವಿಧಾನದಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಅಥವಾ ಸಂಕ್ಷೇಪಿಸುವ ಯಾವುದೇ ಕಾನೂನನ್ನು ರಾಜ್ಯ ರಚಿಸಬಾರದು) ಉಲ್ಲಂಘಿಸುವ ಹಿನ್ನೆಲೆಯಲ್ಲಿ, ಅಕ್ಟೋಬರ್ 18ರ ಸರ್ಕಾರದ ಆದೇಶ ಹಾಗೂ ಆ ನಂತರದ ಎಲ್ಲ ಆದೇಶಗಳಿಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಏನನ್ನೋ ಸಾಧಿಸಲು ಹೊರಟಿದ್ದೀರಿ:
ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಪೀಠ, ಆದೇಶ ಹೊರಡಿಸಿರುವುದು ಯಾರು ಎಂದು ಪ್ರಶ್ನಿಸಿತು. ಗೃಹ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಅಧೀನ ಕಾರ್ಯದರ್ಶಿ ಎಂದು ವಕೀಲರು ತಿಳಿಸಿದರು. ಅದಕ್ಕೆ ನ್ಯಾಯಪೀಠ, ಗೃಹ ಇಲಾಖೆಯೇ? ಏಕೆ ಪೊಲೀಸ್ ಕಾಯ್ದೆ ಇತ್ತಲ್ಲವೇ? ಹೆಚ್ಚುವರಿ ಆದೇಶವೇಕೆ? ನೀವು ಏನನ್ನೋ ಸಾಧಿಸಲು ಹೊರಟಿದ್ದೀರಿ, ಕಾಯ್ದೆ ಇರುವಾಗ ಇದರ ಅಗತ್ಯವೇನಿತ್ತು ಎಂದು ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿತು.
Related Articles
Thank you for your comment. It is awaiting moderation.


Comments (0)