ಲೋಕಾ ಎಡಿಜಿಪಿಗೆ ಬೆದರಿಕೆ ಆರೋಪ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್ಡಿಕೆ
- by Jagan Ramesh
- November 6, 2024
- 252 Views
ಬೆಂಗಳೂರು: ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರೂ (ಎಡಿಜಿಪಿ) ಆದ ವಿಶೇಷ ಪೊಲೀಸ್ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಎಂ. ಚಂದ್ರಶೇಖರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಹಾಗೂ ಬೆದರಿಕೆಯೊಡ್ಡಿದ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸುದ್ದಿಗೋಷ್ಠಿಯಲ್ಲಿ ಮಾನಹಾನಿ ಹೇಳಿಕೆ ನೀಡುವುದರ ಜತೆಗೆ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಎಡಿಜಿಪಿ ಎಂ. ಚಂದ್ರಶೇಖರ್ ನೀಡಿರುವ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಎಫ್ಐಆರ್ ರದ್ದು ಕೋರಿ ಎಚ್.ಡಿ. ಕುಮಾರಸ್ವಾಮಿ ಮತ್ತವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಇನ್ನಷ್ಟೇ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.
ಮನವಿ ಏನು?
ರಾಜಕೀಯ ಎದುರಾಳಿಗಳ ಪ್ರಚೋದನೆಗ ಒಳಗಾಗಿ ದೂರು ದಾಖಲಿಸಲಾಗಿದ್ದು, ಇದರ ಹಿಂದೆ ಅರ್ಜಿದಾರರನ್ನು ಅವಮಾನಿಸುವ ಉದ್ದೇಶವಿದೆ. ಈ ಸಂಬಂಧ ಪತ್ರ ಬರೆದು ಪೊಲೀಸ್ ಇಲಾಖೆಯಲ್ಲಿ ಹಂಚಿಕೆ ಮಾಡಲಾಗಿದೆ. ದೂರಿನಲ್ಲಿ ಮಾಡಿರುವ ಆರೋಪಗಳನ್ನು ಈಗ ಸೃಷ್ಟಿಸಲಾಗಿದೆ. ಎಫ್ಐಆರ್ ದಾಖಲಿಸುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ. ಆದ್ದರಿಂದ, ಎಫ್ಐಆರ್ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಪ್ರಕರಣವೇನು?
ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿರುವ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 2007ರ ಅಕ್ಟೋಬರ್ 5ರಂದು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎನ್ಇಬಿ ರೇಂಜ್ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಪರವಾನಗಿಗೆ ಅನುಮೋದನೆ ಕಡತಕ್ಕೆ ಸಹಿ ಹಾಕಿದ್ದರು. ಈ ವೇಳೆ ಸಲ್ಲಿಕೆಯಾಗಿದ್ದ 29 ಅರ್ಜಿಗಳಲ್ಲಿ ಕೊನೆಯದಾಗಿ ಸಲ್ಲಿಕೆಯಾಗಿದ್ದ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ನ ಅರ್ಜಿಯನ್ನು ನಿಯಮಬಾಹಿರವಾಗಿ ಅನುಮೋದಿಸಿ ಮಂಜೂರು ಮಾಡಲಾಗಿದೆ ಎಂದು ಕುಮಾರಸ್ವಾಮಿ ವಿರುದ್ಧ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತ ಕಾರಣ ಕಾನೂನು ಕ್ರಮಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಎಸ್ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ಮನವಿ ಮಾಡಿದ್ದರು.
ಇದಾದ ಬಳಿಕ ಸೆಪ್ಟೆಂಬರ್ 28 ಮತ್ತು 29ರಂದು ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ. ಕರ್ನಾಟಕ ಕೇಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದು, ಅವರ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿ, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ದಾಖಲೆ ಪಡೆದು ಕರ್ನಾಟಕ ಕೇಡರ್ಗೆ ಸೇರ್ಪಡೆಯಾಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ, ಲಂಚ ಸ್ವೀಕರಿಸುತ್ತಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಎಂ. ಚಂದ್ರಶೇಖರ್ ದೂರು ನೀಡಿದ್ದರು.
ಇದಲ್ಲದೆ, ಸೆಪ್ಟೆಂಬರ್ 29ರಂದು ನಿಖಿಲ್ ಕುಮಾರಸ್ವಾಮಿ ನನ್ನ ವಿರುದ್ಧ ಮಾಧ್ಯಮಗೋಷ್ಠಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಆನಂತರ, ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರ ದೂರಿನಲ್ಲಿ ಆರೋಪಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಆಧರಿಸಿ ಬೆಂಗಳೂರಿನ ಸಂಜಯ್ ನಗರ ಠಾಣೆ ಪೊಲೀಸರು ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 224 (ಸರ್ಕಾರಿ ಅಧಿಕಾರಿಗೆ ಬೆದರಿಕೆ) ಅಡಿ ಪ್ರಕರಣ ದಾಖಲಿಸಿದ್ದಾರೆ.
Related Articles
Thank you for your comment. It is awaiting moderation.
Comments (0)