ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.

ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಹಾಗೂ ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಡಾ. ಪ್ರಭಾಕರ ಭಟ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ತನಿಖೆ ನಡೆಯಲಿ. ಆದರೆ, ಅವರ ವಿರುದ್ಧ ಯಾವುದೇ ಆತುರದ ಅಥವಾ ಬಲವಂತದ ಕ್ರಮ ಕೈಗೊಳ್ಳಬಾರದು. ನ್ಯಾಯಾಲಯದ ಅನುಮತಿ ಇಲ್ಲದೇ ಆರೋಪಪಟ್ಟಿ ಸಲ್ಲಿಸಬಾರದು ಎಂದು ಬಂಟ್ವಾಳ ಪೊಲೀಸರಿಗೆ ಮಧ್ಯಂತರ ಆದೇಶ ಮಾಡಿ, ಅರ್ಜಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು.

ಪ್ರಭಾಕರ ಭಟ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.

ಪ್ರಕರಣವೇನು?
ಬಜ್ಪೆಯಲ್ಲಿ ಮೇ 1ರಂದು ಹತ್ಯೆಯಾದ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಮೇ 12ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಿದ್ದರು. ಆ ಸಭೆಯಲ್ಲಿ ಪ್ರಭಾಕರ ಭಟ್ ಪ್ರಚೋದನಾಕರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ದೂರು ಆಧರಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ, ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಭಾಕರ ಭಟ್ ಅವರು ಕಾನೂನು ಪಾಲಕ ನಾಗರಿಕರಾಗಿದ್ದು, ಅವರ ವಿರುದ್ಧ ಕಪೋಲ ಕಲ್ಪಿತ, ಪೂರ್ವಾಗ್ರಹ ಪೀಡಿತ ಆರೋಪಗಳನ್ನು ಮಾಡಿ ದೂರು ದಾಖಲಿಸಲಾಗಿದೆ. ಅರ್ಜಿದಾರರು ಸುಹಾಸ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆಯೇ ಹೊರತು, ಅವರ ಭಾಷಣದಲ್ಲಿ ದ್ವೇಷ ಹರಡುವ ಯಾವ ಅಂಶ ಅಥವಾ ಉದ್ದೇಶ ಇರಲಿಲ್ಲ. ಘಟನೆ ನಡೆದ 20 ದಿನಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ. ಕಾರ್ಯಕ್ರಮದಲ್ಲಿ ಹಾಜರಿದ್ದವರಲ್ಲಿ ಯಾರೊಬ್ಬರೂ ದ್ವೇಷ ಭಾಷಣದ ಬಗ್ಗೆ ಯಾವುದೇ ಮಾಹಿತಿ, ಪುರಾವೆ ಕೊಟ್ಟಿಲ್ಲ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Related Articles

Comments (0)

Leave a Comment