ಅತ್ಯಾಚಾರ ಆರೋಪ ಪ್ರಕರಣ; ಪುತ್ತಿಲ ವಿರುದ್ಧದ ಎಫ್ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತದರ ಸಂಬಂಧಿತ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮಹಿಳೆಯೊಬ್ಬರು ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಅರುಣ್ ಕುಮಾರ್ ಪುತ್ತಿಲ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ತಡೆ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ.ಪಿ. ಹೆಗ್ಡೆ, 47 ವರ್ಷದ ದೂರುದಾರ ಮಹಿಳೆ, ಒಂದು ವರ್ಷದ ಹಿಂದೆ ಅಂದರೆ 2023ರ ಜೂನ್ ತಿಂಗಳಲ್ಲಿ ನಡೆದಿದೆ ಎನ್ನಲಾದ ಘಟನೆ ಸಂಬಂಧ 2024ರ ಸೆಪ್ಟೆಂಬರ್ 2ರಂದು ದೂರು ದಾಖಲಿಸಿದ್ದಾರೆ. ಅರ್ಜಿದಾರರ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಆಗಸ್ಟ್ 28ರಂದು ಬೆಂಗಳೂರಿನ ಸಿವಿಲ್ ನ್ಯಾಯಾಲಯ ನಿರ್ಬಂಧಕ ಆದೇಶ ಹೊರಡಿಸಿದ ಬಳಿಕ, ಅತ್ಯಾಚಾರ, ಲೈಂಗಿಕ ಶೋಷಣೆ ಆರೋಪದ ಎಫ್‌ಐಆರ್ ದಾಖಲಾಗಿದೆ. ಅಲ್ಲಿವರೆಗೆ ಈ ವಿಷಯವೇ ಇರಲಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದೊಂದು ದುರದ್ದೇಶಪೂರಿತ ಪ್ರಕರಣವಾಗಿದ್ದು, ಪುತ್ತಿಲ ಅವರ ರಾಜಕೀಯ ಚಿತಾವಣೆ ಮೇಲೆ ಈ ದೂರು ದಾಖಲಾಗಿದೆ. ದೂರುದಾರ ಮಹಿಳೆಯ ನಡವಳಿಕೆ ಅಸಹಜ ಮತ್ತು ಅನುಮಾನಾಸ್ಪದವಾಗಿದೆ. ಮುಖ್ಯವಾಗಿ ದೂರು ದಾಖಲಿಸಲು ಒಂದು ವರ್ಷಕ್ಕೂ ಅಧಿಕ ಸಮಯ ವಿಳಂಬವಾಗಿದೆ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಪ್ರಕರಣವೇನು?
ಅರುಣ್ ಕುಮಾರ್ ಪುತ್ತಿಲ ಅವರು 2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ನನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದಾದ ಬಳಿಕ ಅನೇಕ ಕಡೆ ಮುಖಾಮುಖಿ ಭೇಟಿ ಮಾಡಿ ಬೆದರಿಕೆಯೊಡ್ಡಿರುವುದಲ್ಲದೆ, ಹಲವು ರೀತಿಯಲ್ಲಿ ಬ್ಲ್ಯಾಕ್‌ಮೇಲ್ ಸಹ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಅದನ್ನು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮುಂದಿನ ಕ್ರಮಕ್ಕಾಗಿ ಸಲ್ಲಿಸಿದ್ದರು. ಇದರಿಂದ, ಎಫ್‌ಐಆರ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಪುತ್ತಿಲ ಹೈಕೋರ್ಟ್ ಮೆಟ್ಟೇಲಿರಿದ್ದಾರೆ.

Related Articles

Comments (0)

Leave a Comment