ಶಾಸಕ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್
- by Jagan Ramesh
- August 29, 2024
- 53 Views
ಬೆಂಗಳೂರು: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್.ಪಾಟೀಲ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಶಿವಾನಂದ ಪಾಟೀಲ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಯತ್ನಾಳ್ ಪರ ವಕೀಲ ವೆಂಕಟೇಶ್ ಪಿ.ದಳವಾಯಿ ವಾದ ಮಂಡಿಸಿ, ಸಚಿವ ಶಿವಾನಂದ ಪಾಟೀಲರ ಬಗ್ಗೆ ಅರ್ಜಿದಾರರು ವೈಯಕ್ತಿಕ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಸಂಯುಕ್ತಾ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೇ ಹೊರತು ಶಿವಾನಂದ ಪಾಟೀಲ್ ಅಲ್ಲ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 171 ಜಿ ಮತ್ತು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (4) ಪ್ರಕಾರ ಚುನಾವಣಾ ಅಭ್ಯರ್ಥಿ ವಿರುದ್ಧ ಮಾನಹಾನಿ ಹೇಳಿಕೆ ನೀಡಿದರೆ ಅಪರಾಧವಾಗುತ್ತದೆ. ಶಿವಾನಂದ್ ಪಾಟೀಲ್ ಅವರು ಅಭ್ಯರ್ಥಿ ಅಲ್ಲದ ಕಾರಣ ಯತ್ನಾಳ್ ವಿರುದ್ಧದ ಪ್ರಕರಣ ಮುಂದುವರಿಸುವುದು ಕಾನೂನಿನ ದುರ್ಬಳಕೆ ಆಗಲಿದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಪ್ರಕರಣವೇನು?
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆಸಿದ ರ್ಯಾಲಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಶಿವಾನಂದ ಪಾಟೀಲ್ ವಿಚಾರಣಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅದನ್ನು ವಿಚಾರಣೆಗೆ ಪರಿಗಣಿಸಿದ್ದ ನ್ಯಾಯಾಲಯ ಕಳೆದ ಜು.16ರಂದು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಇದರಿಂದ ಪ್ರಕರಣ ರದ್ದು ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.
Related Articles
Thank you for your comment. It is awaiting moderation.
Comments (0)