ಅಕ್ರಮ ಬಂಧನಕ್ಕೀಡಾಗಿದ್ದ ಹೋಂಸ್ಟೇ ಮಾಲೀಕರಿಗೆ ಪರಿಹಾರ ಪಾವತಿಸಲು ವಿಫಲ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಅಮೆರಿಕ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹೋಮ್‌ಸ್ಟೇ ಮಾಲೀಕರನ್ನು ಅಕ್ರಮವಾಗಿ ಬಂಧಿಸಿರುವುದರಿಂದ ಅವರಿಗೆ 5 ಲಕ್ಷ ರೂ. ಪರಿಹಾರ ಪಾವತಿಸುವಂತೆ ಹೊರಡಿಸಿದ್ದ ಆದೇಶ ಪಾಲಿಸದ ಕ್ರಮ ಪ್ರಶ್ನಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಹೈಕೋರ್ಟ್‌ನ ಸಮನ್ವಯ ಪೀಠದ ನಿರ್ದೇಶನದಂತೆ ಒಂದು ತಿಂಗಳಲ್ಲಿ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಪಾವತಿಸಲಿಲ್ಲ ಎಂದು ಆಕ್ಷೇಪಿಸಿ ಹೋಂಸ್ಟೇ ಮಾಲೀಕ ಪಾಲೇಕಂಡ ಪೊನ್ನಪ್ಪ ಅಲಿಯಾಸ್‌ ವಿಶಾಲ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್‌ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಅಂಗದ್ ಕಾಮತ್ ವಾದ ಮಂಡಿಸಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನ ಸಮನ್ವಯ ಪೀಠದ ಪ್ರಮಾಣೀಕೃತ ಆದೇಶವು ಜುಲೈ 15ರಂದು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ಮೂಲಕ ತಲುಪಿದೆ. ಪರಿಹಾರ ಪಾವತಿಸಲು ವಿಧಿಸಿದ್ದ ಗಡುವು ಆಗಸ್ಟ್‌ 12ರಂದೇ ಮುಕ್ತಾಯವಾಗಿದೆ. ಹೈಕೋರ್ಟ್‌ ಆದೇಶವನ್ನು ಪಾಲಿಸುವಂತೆ ಸಕ್ಷಮ ಪ್ರಾಧಿಕಾರಕ್ಕೆ ಜುಲೈ 27ರಂದು ನೋಟಿಸ್‌ ನೀಡಲಾಗಿದೆ. ಅದಾಗ್ಯೂ, ಪರಿಹಾರ ಪಾವತಿಸಿಲ್ಲ ಮತ್ತು ಅದರ ಸಂಬಂಧ ವಿವರಣೆಯನ್ನೂ ನೀಡಿಲ್ಲ ಎಂದರು.

ಪ್ರಕರಣವೇನು?
ಅರ್ಜಿದಾರರ ಮಾಲೀಕತ್ವದ ಹೋಮ್‌ಸ್ಟೇನಲ್ಲಿ ತಂಗಿದ್ದ ಅಮೆರಿಕದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಿಲ್ಲ ಎಂಬ ಕಾರಣಕ್ಕೆ ಏಪ್ರಿಲ್‌ 19ರಂದು ಬಂಧಿಸಲಾಗಿತ್ತು. ಜುಲೈನಲ್ಲಿ ಪೊನ್ನಪ್ಪ ಬಂಧನ ಅಕ್ರಮ ಎಂದಿದ್ದ ಹೈಕೋರ್ಟ್‌ನ ಸಮನ್ವಯ ನ್ಯಾಯಪೀಠ, ಹೋಮ್‌ಸ್ಟೇ ಮಾಲೀಕನ ಮೂಲಭೂತ ಹಕ್ಕು ಉಲ್ಲಂಘಿಸಿದ್ದಕ್ಕಾಗಿ 5 ಲಕ್ಷ ರೂ. ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆನಂತರ, ಪೊನ್ನಪ್ಪ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನೂ ನ್ಯಾಯಾಲಯ ರದ್ದುಪಡಿಸಿತ್ತು. ಆದರೆ, ನ್ಯಾಯಾಲಯ ನೀಡಿದ್ದ ಗಡುವು ಮುಗಿದರೂ ಪರಿಹಾರ ಪಾವತಿಸಿಲ್ಲ ಎಂದು ಆಕ್ಷೇಪಿಸಿ ಪೊನ್ನಪ್ಪ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

Related Articles

Comments (0)

Leave a Comment