ಸಿಬಿಎಸ್‌ಇ, ಸಿಐಎಸ್‌ಸಿಇ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಪ್ರಶ್ನಿಸಿದ ಪಿಐಎಲ್; ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 3 ವಾರ ಗಡುವು
- by Prashanth Basavapatna
- July 11, 2025
- 83 Views

ಬೆಂಗಳೂರು: ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರಾದ ಸಿ. ಸೋಮಶೇಖರ್ ಮತ್ತಿತರರು ಹಾಗೂ ಕೆಲ ಶಿಕ್ಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರ ಪ್ರರ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು, ಕಳೆದ 2 ವರ್ಷಗಳಿಂದ ರಾಜ್ಯ ಸರ್ಕಾರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ ಎಂದರು. ಅದಕ್ಕೆ ನ್ಯಾಯಪೀಠ, ಎರಡು ವರ್ಷದಿಂದ ಸರ್ಕಾರ ಏನನ್ನೂ ಮಾಡಿಲ್ಲ. ಬೇಗ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಮಧ್ಯಂತರ ಪರಿಹಾರ ಕೋರಿರುವ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಮೌಖಿಕವಾಗಿ ಹೇಳಿತಲ್ಲದೆ, 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ಅರ್ಜಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಆಕ್ಷೇಪವೇನು?
ಕರ್ನಾಟಕ ಭಾಷಾ ಕಲಿಕಾ ಕಾಯ್ದೆ, ನಿಯಮಗಳು ಮತ್ತು ನಿರಾಕ್ಷೇಪಣಾ ಪತ್ರ ನಿಯಮಗಳ ಪ್ರಕಾರ ರಾಜ್ಯದಲ್ಲಿನ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಮಾನ್ಯತೆ ಪಡೆದಿರುವ ಶಾಲೆಗಳು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡವನ್ನು ಬೋಧಿಸಬೇಕು ಎಂದು ಸರ್ಕಾರ ಹೇಳಿದೆ. ನಿರಾಕ್ಷೇಪಣಾ ಪತ್ರ ನಿಯಮಗಳ ಪ್ರಕಾರ ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯನ್ನಾಗಿ ಬೋಧಿಸಬೇಕು. ಕರ್ನಾಟಕ ಭಾಷಾ ಕಲಿಕಾ ಕಾಯ್ದೆ 2015ರ ಸೆಕ್ಷನ್ 3, ಕರ್ನಾಟಕ ಭಾಷಾ ಕಲಿಕಾ ನಿಯಮಗಳು 2017ರ ನಿಯಮ 3 ಮತ್ತು ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ನಿರಾಕ್ಷೇಪಣಾ ಪತ್ರ ನೀಡಿಕೆ ಮತ್ತು ನಿಯಂತ್ರಣ) ನಿಯಮಗಳ 6(2)ರಿಂದ ವಿದ್ಯಾರ್ಥಿಗಳಿಗೆ ಅನನುಕೂಲ ಮತ್ತು ತೊಂದರೆಯಾಗುತ್ತದೆ. ಕಾಯ್ದೆ ಮತ್ತು ನಿಯಮಗಳನ್ನು ಪಾಲಿಸದಿದ್ದರೆ ನಿಯಮ 6(5)ರ ಅನ್ವಯ ಶೈಕ್ಷಣಿಕ ಸಂಸ್ಥೆಗೆ ನೀಡಲಾಗಿರುವ ನಿರಾಕ್ಷೇಪಣಾ ಪತ್ರವನ್ನು ಹಿಂಪಡೆಯಲಾಗುತ್ತದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಕರ್ನಾಟಕದಲ್ಲಿ ತಮ್ಮ ಇಚ್ಛೆಯಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನು ಕಲಿಯುವ ವಿದ್ಯಾರ್ಥಿಗಳ ಹಕ್ಕುಗಳಿಗೆ ಕಾಯ್ದೆಗಳು ಗಂಭೀರ ಮತ್ತು ಪೂರ್ವಾಗ್ರಹ ಪೀಡಿತ ಅಡ್ಡಿ ಉಂಟು ಮಾಡುತ್ತವೆ. ಇದು ಮಕ್ಕಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಲಿದ್ದು, ಭವಿಷ್ಯದಲ್ಲಿ ಅವರ ಔದ್ಯೋಗಿಕ ಅವಕಾಶಗಳಿಗೆ ತೊಂದರೆಯುಂಟು ಮಾಡುತ್ತದೆ. ಕನ್ನಡ ಹೊರತುಪಡಿಸಿ ಬೇರೆ ವಿಷಯಗಳನ್ನು ಬೋಧಿಸುವ ಶಿಕ್ಷಕರ ಜೀವನಕ್ಕೂ ಇದು ಸಮಸ್ಯೆಯಾಗಲಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
Related Articles
Thank you for your comment. It is awaiting moderation.
Comments (0)