ಬೀದಿ ವ್ಯಾಪಾರಿಗಳಿಂದ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಿ; ಬಿಬಿಎಂಪಿ, ಪೊಲೀಸರಿಗೆ ಹೈ ನಿರ್ದೇಶನ

ಬೆಂಗಳೂರು: ರಂಜಾನ್‌ ಮತ್ತಿತರರ ಹಬ್ಬಗಳ ಸಂದರ್ಭದಲ್ಲಿ ಬೆಂಗಳೂರಿನ ಭಾರತಿನಗರ, ಶಿವಾಜಿನಗರ, ಕಮರ್ಷಿಯಲ್‌ ಸ್ಟ್ರೀಟ್‌, ಬ್ರಾಡ್‌ ವೇ ಮತ್ತಿತರ ರಸ್ತೆಗಳಲ್ಲಿ ವಾಹನಗಳು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್‌ ಆಯುಕ್ತರು ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಬೀದಿ ವ್ಯಾಪಾರಿಗಳು ರಸ್ತೆಗಳನ್ನು ಅತಿಕ್ರಮಿಸಿಕೊಂಡು ವ್ಯಾಪಾರ ನಡೆಸುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ಷೇಪಿಸಿ ಶಿವಾಜಿನಗರದ ಸಬೀರ್‌ ಸೇರಿ ಹತ್ತಕ್ಕೂ ಅಧಿಕ ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥಪಡಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಅರ್ಜಿದಾರರು ಉಲ್ಲೇಖಿಸಿರುವ ರಸ್ತೆಗಳಲ್ಲಿ ಹಬ್ಬಗಳು ಮತ್ತಿತರ ಸಂದರ್ಭದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ, ರಂಜಾನ್‌ ಮತ್ತಿತರರ ಹಬ್ಬಗಳ ಸಂದರ್ಭದಲ್ಲಿ ಈ ರಸ್ತೆಗಳಲ್ಲಿವಾಹನಗಳು, ಪಾದಚಾರಿಗಳು ಹಾಗೂ ಸಾರ್ವಜನಿಕ ಸಂಚಾರ ಸುಗಮ ರೀತಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಅರ್ಜಿದಾರರ ಪರ ವಕೀಲರು, ಶಿವಾಜಿನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ಬೀದಿ ಬದಿ ವ್ಯಾಪಾರಿಗಳು‌ ರಸ್ತೆಗಳನ್ನು ಅತಿಕ್ರಮಿಸಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುವ ಜತೆಗೆ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್‌ಗಳ ಸಂಚಾರಕ್ಕೂ ಕಷ್ಟವಾಗುತ್ತಿದೆ. ಆದ್ದರಿಂದ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Related Articles

Comments (0)

Leave a Comment