ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ; ಮುಚ್ಚಿದ ಲಕೋಟೆಯಿಂದ ವರದಿ ತೆರೆಯದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
- by Jagan Ramesh
- June 16, 2026
- 129 Views
ಬೆಂಗಳೂರು: ರಾಜ್ಯದ ನಾಗರಿಕರ ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸಿ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಮುಚ್ಚಿದ ಲಕೋಟೆಯಿಂದ ತೆರೆಯದಂತೆ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.
ಸಮೀಕ್ಷೆಗಾಗಿ 2025ರ ಆಗಸ್ಟ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು, ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ, ಹಿಂದೆ ನ್ಯಾಯಾಲಯ ದತ್ತಾಂಶದಲ್ಲಿ ಗೌಪ್ಯತೆ ಕಾಯ್ದುಕೊಳ್ಳಬೇಕು, ಯಾವುದೇ ಕಾರಣಕ್ಕೂ ಸೋರಿಕೆಯಾಗಬಾರದು ಮತ್ತು ದತ್ತಾಂಶ ಹಂಚಿಕೊಳ್ಳಬಾರದು ಎಂದು ಆದೇಶಿಸಿತ್ತು. ಹೀಗಿದ್ದರೂ, ಆಯೋಗ ವರದಿ ಸಲ್ಲಿಸಿದ ಬಳಿಕ ದತ್ತಾಂಶ ಸೋರಿಕೆಯಾಗಿದೆ. ಆದ್ದರಿಂದ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಹಿಂದುಳಿದ ವರ್ಗಗಳ ಆಯೋಗ ದತ್ತಾಂಶ ಹಂಚಿಕೊಂಡಿಲ್ಲ ಎಂದು ನ್ಯಾಯಾಲಯಕ್ಕೆ ಸಮಜಾಯಿಷಿ ನೀಡಿದರು.
ಆಗ ನ್ಯಾಯಪೀಠ, ಮುಚ್ಚಿದ ಲಕೋಟೆಯಲ್ಲಿರುವ ವರದಿಯನ್ನು ತೆರೆಯದಂತೆ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)