ಮಾನ್ವಿ ತಾಲೂಕಿಗೆ ಗಡಿಪಾರು; ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶಿಸಲು ಪುತ್ತೂರು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ 2026ರ ಜನವರಿ 31ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ಪೀಠದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಇಲ್ಲವೆಂದು ತಿಳಿಸಿ ಮೇಲ್ಮನವಿವಜಾಗೊಳಿಸಿತು.

ಇದೇ ವೇಳೆ, ಏಕಸದಸ್ಯ ನ್ಯಾಯಪೀಠದ ಆದೇಶದ ಅನುಸಾರ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಿ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಪುತ್ತೂರು ಉಪ ವಿಭಾಗಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರಿನ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ 2025ರ ಸೆ.18ರಂದು ಆದೇಶ ಮಾಡಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು 2025ರ ನವೆಂಬರ್ 17ರಂದು ಇತ್ಯರ್ಥಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ, ಸಕಾರಣಗಳನ್ನು ನೀಡಿ ಅಗತ್ಯ ನಿಯಮಗಳನ್ನು ಪಾಲಿಸಿ 15 ದಿನಗಳಲ್ಲಿ ಹೊಸದಾಗಿ ಆದೇಶ ಹೊರಡಿಸುವಂತೆ ಸೂಚಿಸಿ ಪ್ರಕರಣವನ್ನು ಮತ್ತೆ ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿತ್ತು.

ಅದರಂತೆ, ಪ್ರಕರಣವನ್ನು ಮರುಪರಿಶೀಲಿಸಿದ್ದ ಉಪ ವಿಭಾಗಾಧಿಕಾರಿ ಮತ್ತೊಮ್ಮೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ಸರಹದ್ದಿಗೆ ತಿಮರೋಡಿ ಅವರನ್ನು ಗಡಿಪಾರು ಮಾಡಿ 2025ರ ಡಿಸೆಂಬರ್ 16ರಂದು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಆಕ್ಷೇಪಣೆಗಳನ್ನು ಪರಿಗಣಿಸಿ ಮತ್ತು ಅವರ ಅಹವಾಲು ಆಲಿಸಿ 3 ವಾರದಲ್ಲಿ ಮತ್ತೆ ಪ್ರಕರಣದ ಕುರಿತು ಹೊಸದಾಗಿ ಆದೇಶ ಮಾಡಬೇಕು ಎಂದು ನಿರ್ದೇಶಿಸಿ 2026ರ ಜನವರಿ 31ರಂದು ಪುತ್ತೂರು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದ ತಿಮರೋಡಿ, ಪ್ರಕರಣವನ್ನು ಎರಡನೇ ಬಾರಿಗೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸುವ ಅವಶ್ಯತೆ ಇರಲಿಲ್ಲ. ಗಡಿಪಾರು ಮಾಡುವ ಮೂಲಕ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಅರ್ಜಿದಾರರಿಗೆ ಲಭ್ಯವಿರುವ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂದು ಆಕ್ಷೇಪಿಸಿದ್ದರು.

Related Articles

Comments (0)

Leave a Comment