- ಟ್ರಯಲ್ ಕೋರ್ಟ್
- ಹೈಕೋರ್ಟ್
- Like this post: 23
ಮುಡಾ ಹಗರಣದ ಬಿ ವರದಿ ಪ್ರಶ್ನಿಸಿದ ಅರ್ಜಿ; ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
- by Jagan Ramesh
- March 26, 2026
- 6 Views
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ವರದಿ ಅಂಗೀಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಸಿದ್ದರಾಮಯ್ಯ ಮತ್ತಿತರ ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ವರದಿ ಅಂಗೀಕರಿಸಿ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ಹಿರಿಯ ವಕೀಲೆ ಲಕ್ಷ್ಮೀ ಐಯಂಗಾರ್ ಅವರು, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಇದೊಂದು ರೀತಿಯಲ್ಲಿ ಸಮಿತಿ ವರದಿಯಂತಿದೆ. ಅರ್ಜಿ ಸಂಬಂಧ ರಿಜಿಸ್ಟ್ರಿ ಎತ್ತಿರುವ ಕಚೇರಿ ಆಕ್ಷೇಪಣೆ ಸರಿಪಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ಆಲಿಸಿದ ನ್ಯಾಯಪೀಠ ಅರ್ಜಿಯಲ್ಲಿ ಪ್ರತಿವಾದಿಗಳಾದ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇಡಿ ಗೆ ನೋಟಿಸ್ ಜಾರಿ ಮಾಡಿತಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಬಾವಮೈದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಹಾಗೂ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಮನವಿ ಏನು?
ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪ ಪ್ರಕರಣದ ತನಿಖೆ ನಡೆಸಿ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಸಲ್ಲಿಸಿದ್ದ ಬಿ ವರದಿಯನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಆದ್ದರಿಂದ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಪಡೆದು ಪರಿಶೀಲಿಸಬೇಕು. ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಜತೆಗೆ, ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಹಾಗೂ ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.


Comments (0)