ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳದ ಆರೋಪ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯ ಈ ಹಿಂದೆ ನೀಡಿರುವ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಕೀಲೆ ಹಾಗೂ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾ ಕಾಟ್ವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಅಮಿತ್ ನಾಯಕ್ ಅವರ ವಾದ ಆಲಿಸಿದ ನ್ಯಾಯಪೀಠ, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತರಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎ. ಹನುಮನರಸಯ್ಯ, ಅಬಕಾರಿ ಆಯುಕ್ತ ಡಾ. ಜೆ. ರವಿಶಂಕರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜನವರಿ 9ಕ್ಕೆ ಮುಂದೂಡಿತು.

ಪ್ರಕರಣವೇನು?
ರಾಜ್ಯದಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಮನೆ-ಅಂಗಡಿಗಳಲ್ಲಿ ವ್ಯಾಪಕವಾಗಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಕುರಿತು ಮಹಿಳಾ ಸಂಘಟನೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾ ಕಾಟ್ವಾ 2020ರಲ್ಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದ ದೂರುಗಳು ಬಂದಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಅಥವಾ ಮಹಿಳಾ ಸಂಘಟನೆಗಳಿಂದ ದೂರುಗಳು ಬಂದರೆ ಮಹಿಳಾ ಹಕ್ಕುಗಳ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಆದ್ಯತೆಯ ಮೇಲೆ ತುರ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಜರಗಿಸಬೇಕು ಎಂದು 2020ರ ಡಿಸೆಂಬರ್ 1ರಂದು ಆದೇಶಿಸಿತ್ತು.

ಹೈಕೋರ್ಟ್‌ನ ಈ ಆದೇಶ ಪಾಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಅನೇಕ ಮನವಿಗಳನ್ನು ಸಲ್ಲಿಸಲಾಗಿದೆ. 2021ರಿಂದ 2023ರವರೆಗೆ ಹಲವು ದೂರುಗಳನ್ನು ದಾಖಲಿಸಲಾಗಿದೆ. ಆದರೂ, ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಹಾಗೂ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅರ್ಜಿದಾರರು, ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

Related Articles

Comments (0)

Leave a Comment