ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಅಂಶಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ; ಹೈಕೋರ್ಟ್ನಲ್ಲಿ ಇ.ಡಿ ವಾದ
- by Prashanth Basavapatna
- September 1, 2026
- 7 Views
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ನಿವೇಶನ ಹಂಚಿಕೆ ಹಗರಣದ ಸಂಬಂಧ ತನಿಖೆ ನಡೆಸಿ ಬಿ ವರದಿ ಸಲ್ಲಿಸಿರುವ ಲೋಕಾಯುಕ್ತ ತನಿಖಾಧಿಕಾರಿಗಳು ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಯಲ್ಲಿ ಬೆಳಕಿಗೆ ಬಂದಿರುವ ಹಲವು ಅಂಶಗಳನ್ನು ಪರಿಗಣಿಸಿಲ್ಲ ಎಂದು ಇ.ಡಿ ಪರ ವಕೀಲರು ಹೈಕೋರ್ಟ್ ಮುಂದೆ ವಾದ ಮಂಡಿಸಿದರು.
ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ವರದಿ ಅಂಗೀಕರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಜಾರಿ ನಿರ್ದೇಶನಾಲಯ ಹಾಗೂ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಅರವಿಂದ್ ಕಾಮತ್ ವಾದ ಮಂಡಿಸಿ, ಇ.ಡಿ ತನಿಖೆಯಲ್ಲಿ ಬೆಳಕಿಗೆ ಬಂದಿರುವ ಹಲವು ಅಂಶಗಳನ್ನು ಲೋಕಾಯುಕ್ತ ತನಿಖಾಧಿಕಾರಿ ಪರಿಗಣಿಸಿಲ್ಲ. ಕಾನೂನುಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ ಹಾಗೂ ಭೂಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ. ಆದ್ದರಿಂದ, ಬಿ ವರದಿ ಅಂಗೀಕರಿಸಿರುವ ವಿಶೇಷ ನ್ಯಾಯಾಲಯದ ಆದೇಶ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಬುಧವಾರ ಮಧ್ಯಾಹ್ನ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)