ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು; ಅ. 8ರವರೆಗೆ ಆದೇಶ ಜಾರಿ ಬೇಡವೆಂದ ಹೈಕೋರ್ಟ್
- by Jagan Ramesh
- September 30, 2025
- 255 Views

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.
ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿರುವ ಮಹೇಶ್ ಶೆಟ್ಟಿ ತಿಮರೋಡಿ, ಅರ್ಜಿ ಇತ್ಯರ್ಥವಾಗುವವರೆಗೆ ಆದೇಶ ಜಾರಿಗೆ ತಡೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.
Comments (0)